ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಪ್ರಕರಣ: ಸೆ.5ಕ್ಕೆ ವಿಚಾರಣೆ ಮುಂದೂಡಿಕೆ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್

ಕರ್ನಾಟಕದಲ್ಲಿ ಹಿಜಾಬ್ ವಿವಾದ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. 
ಸುಪ್ರೀಂ ಕೋರ್ಟ್, ಹಿಜಾಬ್ ಸಾಂದರ್ಭಿಕ ಚಿತ್ರ
ಸುಪ್ರೀಂ ಕೋರ್ಟ್, ಹಿಜಾಬ್ ಸಾಂದರ್ಭಿಕ ಚಿತ್ರ

ನವದೆಹಲಿ:ಕರ್ನಾಟಕದಲ್ಲಿ ಹಿಜಾಬ್ ವಿವಾದ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. 

ಹಿಜಾಬ್ ಮುಸ್ಲಿಂ ಧರ್ಮೀಯರಲ್ಲಿ ಆಚರಣೆಯ ಕಡ್ಡಾಯ ಭಾಗವಲ್ಲ ಎಂದು ಕಳೆದ ಫೆಬ್ರವರಿಯಲ್ಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಹಲವು ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಪಟ್ಟಂತೆ ಇದೇ ಸಂದರ್ಭದಲ್ಲಿ ಹೆಚ್ಚಿನ ವಿವರಣೆ ಕೇಳಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. 

ರಾಜ್ಯ ಸರ್ಕಾರ ಪದವಿ ಪೂರ್ವ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿ ಕಾನೂನು ಹೊರಡಿಸಿತ್ತು. ಇಂದು ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸಿದ ರಾಜ್ಯ ಸರ್ಕಾರ ಪರ ಅಡ್ವೊಕೇಟ್, ಮುಂದಿನ ಸೋಮವಾರವೇ ಹಿಜಾಬ್ ವಿಚಾರಣೆಯನ್ನು ಕೈಗೆತ್ತಿಕೊಳ್ಳಬೇಕೆಂದು ಮನವಿ ಮಾಡಿದೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಅರ್ಜಿಗಳ ಕುರಿತು ರಾಜ್ಯಕ್ಕೆ ನೋಟಿಸ್ ಜಾರಿಗೊಳಿಸಿ ಸೆಪ್ಟೆಂಬರ್ 5 ರಂದು ವಿಚಾರಣೆಗೆ ಮುಂದೂಡಿತು.ಇದೇ ಸಂದರ್ಭದಲ್ಲಿ ವಿಚಾರಣೆ ಮುಂದೂಡಿಕೆಯನ್ನು ಕೋರಿದ ಕೆಲವು ಅರ್ಜಿದಾರರನ್ನು ಪೀಠವು ತರಾಟೆಗೆ ತೆಗೆದುಕೊಂಡು ಈ ರೀತಿಯ ಫೋರಂ ಶಾಪಿಂಗ್ ನ್ನು ಅನುಮತಿಸುವುದಿಲ್ಲ ಎಂದು ಹೇಳಿತು.

ಹಿಜಾಬ್ ಧರಿಸುವುದು ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ರಕ್ಷಿಸಬಹುದಾದ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. 

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸದಂತೆ ಸರ್ಕಾರ ಆದೇಶ ನೀಡಿದ್ದಕ್ಕೆ ರಾಜ್ಯಾದ್ಯಂತ ಭಾರೀ ಗಲಾಟೆ, ಪ್ರತಿಭಟನೆಗಳು ನಡೆದಿದ್ದವು. ಹಲವು ವಿದ್ಯಾರ್ಥಿನಿಯರು ಪರೀಕ್ಷೆಯನ್ನೂ ಬಹಿಷ್ಕರಿಸಿದ್ದರು. ಈ ಪ್ರಕರಣದ ಕುರಿತು ಕಳೆದ ಮಾರ್ಚ್ 15ರಂದು ಕರ್ನಾಟಕ ಹೈಕೋರ್ಟ್ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಲ್ಲಿ ಯೂನಿಫಾರ್ಮ್ ಮಾತ್ರ ಧರಿಸಬೇಕು, ಯಾವುದೇ ಧರ್ಮ ಸೂಚಕ ಉಡುಪನ್ನು ಧರಿಸುವಂತಿಲ್ಲ ಎಂದು ತೀರ್ಪು ನೀಡಿತ್ತು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಬಗ್ಗೆ ಕರ್ನಾಟಕ ಹೈಕೋರ್ಟ್​ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಇಂದು ಸುಪ್ರೀಂ ಕೋರ್ಟ್​ ವಿಚಾರಣೆ ನಡೆಸಿ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com