ತೆಲಂಗಾಣದಲ್ಲಿ 10ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ
ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ತಿರುಮಲಗಿರಿ ಗ್ರಾಮದಲ್ಲಿ 10ನೇ ತರಗತಿಯ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಶನಿವಾರ ಹಿಂಸಾತ್ಮಕ ಪ್ರತಿಭಟನೆ ನಡೆಸಿದರು.
Published: 03rd December 2022 03:14 PM | Last Updated: 03rd December 2022 05:29 PM | A+A A-

ಪ್ರಾತಿನಿಧಿಕ ಚಿತ್ರ
ಹೈದರಾಬಾದ್: ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ತಿರುಮಲಗಿರಿ ಗ್ರಾಮದಲ್ಲಿ 10ನೇ ತರಗತಿಯ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಶನಿವಾರ ಹಿಂಸಾತ್ಮಕ ಪ್ರತಿಭಟನೆ ನಡೆಸಿದರು.
ಶುಕ್ರವಾರ ರಾತ್ರಿ ಮನೆಯಲ್ಲಿ ಒಬ್ಬಳೇ ಇದ್ದ 16 ವರ್ಷದ ಬಾಲಕಿ ಶನಿವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಮೂವರು ಯುವಕರು ಮನೆಗೆ ನುಗ್ಗಿ ಆಕೆಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಯಂತೆ ಕಾಣಿಸಲು ಮೃತದೇಹವನ್ನು ನೇಣು ಬಿಗಿದಿದ್ದಾರೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ.
ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತ ಯುವಕರೊಬ್ಬರ ಮನೆಯ ಮೇಲೂ ದಾಳಿ ನಡೆಸಿ ಕಾರು ಹಾಗೂ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ತೆಲಂಗಾಣ: ಸಹಪಾಠಿ ಮೇಲೆ ಗ್ಯಾಂಗ್ ರೇಪ್ ನಡೆಸಿ, ವಿಡಿಯೋ ಚಿತ್ರೀಕರಿಸಿದ್ದ ಐವರು ಅಪ್ರಾಪ್ತರ ಬಂಧನ
ಸಂತ್ರಸ್ತೆಯ ಪೋಷಕರು ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದು, ಘಟನೆ ನಡೆದಾಗ ಮನೆಯಲ್ಲಿ ಆಕೆ ಒಬ್ಬಳೇ ಇದ್ದಳು. ಆಕೆಯ ಸಂಬಂಧಿಕರ ಪ್ರಕಾರ, ಸಂತ್ರಸ್ತೆ ಶುಕ್ರವಾರ ತಡರಾತ್ರಿ ತನ್ನ ತಂದೆಯೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಾಳೆ. ಆದರೆ, ಅವರು ಬೆಳಿಗ್ಗೆ ಮನೆಗೆ ಹಿಂದಿರುಗಿದಾಗ ಆಕೆ ಶವವಾಗಿ ಪತ್ತೆಯಾಗಿದ್ದಾಳೆ ಎಂದಿದ್ದಾರೆ.
ಈ ಹಿಂದೆ ಶಂಕಿತರೊಬ್ಬರ ಕಿರುಕುಳದ ಬಗ್ಗೆ ದೂರು ನೀಡಿದ್ದಾಗಿ ಸಂತ್ರಸ್ತೆಯ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಸ್ಥಳೀಯ ಶಾಸಕ ಲಕ್ಷ್ಮಣರೆಡ್ಡಿ ಗ್ರಾಮಕ್ಕೆ ಭೇಟಿ ನೀಡಿ, ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿಯೂ ಭರವಸೆ ನೀಡಿದರು.