ಮಧ್ಯ ಪ್ರದೇಶ: ಚಾಲಕನಿಗೆ ಹೃದಯಾಘಾತ, ಹಲವು ವಾಹನಗಳಿಗೆ ಬಸ್ ಡಿಕ್ಕಿ, ಇಬ್ಬರು ಸಾವು
ಮಧ್ಯ ಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಚಾಲಕನಿಗೆ ಹೃದಯಾಘಾತವಾಗಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ....
Published: 03rd December 2022 03:26 PM | Last Updated: 03rd December 2022 05:30 PM | A+A A-

ಸಾಂದರ್ಭಿಕ ಚಿತ್ರ
ಜಬಲ್‌ಪುರ: ಮಧ್ಯ ಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಚಾಲಕನಿಗೆ ಹೃದಯಾಘಾತವಾಗಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರದಂದು ದಮೋಹ್ ನಾಕಾ ಚೌಕದ ಟ್ರಾಫಿಕ್ ಸಿಗ್ನಲ್‌ನಲ್ಲಿ ನಗರ ಸಾರಿಗೆ ಸಂಸ್ಥೆಯ ಬಸ್ ಅಪಘಾತಕ್ಕೀಡಾಗಿದೆ ಎಂದು ಗೋಹಲ್‌ಪುರ ಪೊಲೀಸ್ ಠಾಣೆಯ ಉಸ್ತುವಾರಿ ವಿಜಯ್ ತಿವಾರಿ ತಿಳಿಸಿದ್ದಾರೆ.
ಬಸ್ ಚಾಲನೆ ಮಾಡುತ್ತಿದ್ದ ಹರದೇವ್‌ಪಾಲ್ ಸಿಂಗ್(50) ಅವರಿಗೆ ಹೃದಯಾಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಮುಂದೆ ಸಿಗ್ನಲ್‌ನಲ್ಲಿ ನಿಂತಿದ್ದ ಇ-ರಿಕ್ಷಾ ಮತ್ತು ಬೈಕ್ ಗಳು ಸೇರಿದಂತೆ ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮೋಟಾರ್ ಸೈಕಲ್ ಒಂದು ಬಸ್ ಚಕ್ರಕ್ಕೆ ಸಿಲುಕಿಕೊಂಡ ನಂತರ ಬಸ್ ನಿಂತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನು ಓದಿ: ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್'ನ ಬ್ರೇಕ್ ಫೇಲ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಬಸ್ಸಿನೊಳಗಿದ್ದ ಜನ ಚಾಲಕ ಸ್ಟೀರಿಂಗ್ ಮೇಲೆ ಬಿದ್ದಿರುವುದನ್ನು ಕಂಡು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಸಿಂಗ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೋಟಾರ್‌ಸೈಕಲ್‌ನಲ್ಲಿದ್ದ 62 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಮತ್ತು ಐವರು ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿವೆ, ಇದರಲ್ಲಿ ಬಸ್ ಕೆಲವು ವಾಹನಗಳಿಗೆ ಡಿಕ್ಕಿ ಹೊಡೆಯುತ್ತಿರುವುದನ್ನು ಕಾಣಬಹುದು.