ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ನಾಳೆ ಪ್ರಮಾಣ ವಚನ ಸ್ವೀಕಾರ: ಮಧ್ಯಾಹ್ನ 2ಕ್ಕೆ ಕಾರ್ಯಕ್ರಮ
ಗಾಂಧಿನಗರ: ಗುಜರಾತಿನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಎರಡನೇ ಅವಧಿಗೆ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ಭಾನುವಾರ ಹೇಳಿದ್ದಾರೆ.
ಗಾಂಧಿನಗರದ ಹೊಸ ಸಚಿವಾಲಯ ಬಳಿಯ ಹೆಲಿಪ್ಯಾಡ್ ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಗುಜರಾತಿನ 18ನೇ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ರಾಜ್ಯಪಾಲ ಆಚಾರ್ಯ ದೇವ ವ್ರತ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.ಪಟೇಲ್ ಜೊತೆಗೆ ಕೆಲವು ಹೊಸ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.
ಇತ್ತೀಚಿಗೆ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ 156 ಸ್ಥಾನಗಳನ್ನು ಗೆಲ್ಲುವ ಮೂಲಕ ಸತತ ಏಳನೇ ಅವಧಿಗೆ ಅಧಿಕಾರಕ್ಕೇರುತ್ತಿದೆ. ಚುನಾವಣಾ ಫಲಿತಾಂಶದ ನಂತರ ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲು 60 ವರ್ಷದ ಪಟೇಲ್ ಶುಕ್ರವಾರ ತಮ್ಮ ಇಡೀ ಸಂಪುಟದೊಂದಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ