ಗೋವಾ ಚುನಾವಣೆ: ಬಿಜೆಪಿ ಒಳ್ಳೆಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ: ಪರಿಕ್ಕರ್ ಪುತ್ರ ಉತ್ಪಲ್
ಗೋವಾ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಜೆಪಿ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ತಾವು ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಗೋವಾ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಹೇಳಿದ್ದಾರೆ.
Published: 23rd January 2022 06:52 PM | Last Updated: 23rd January 2022 06:52 PM | A+A A-

ಉತ್ಪಲ್ ಪರಿಕ್ಕರ್
ಪಣಜಿ: ಗೋವಾ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಜೆಪಿ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ತಾವು ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಗೋವಾ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಹೇಳಿದ್ದಾರೆ.
ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ ಬಳಿಕ ಮಾಜಿ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಬಿಜೆಪಿಯನ್ನು ತ್ಯಜಿಸಿ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದರು. ಮಾಜಿ ಕೇಂದ್ರ ಸಚಿವರಾದ ಮನೋಹರ್ ಪಾರಿಕ್ಕರ್ 25 ವರ್ಷಗಳ ಕಾಲ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಉತ್ಪಲ್ ತಂದೆಯ ಕ್ಷೇತ್ರವನ್ನು ಪ್ರತಿನಿಧಿಸಲು ಬಯಸಿದ್ದರು. ಅದರೆ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಕ್ಕಿರಲಿಲ್ಲ.
ಇದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿರುವ ಉತ್ಪಲ್ ಪರಿಕ್ಕರ್, ಬಿಜೆಪಿ ಪಣಜಿ ಕ್ಷೇತ್ರದಿಂದ "ಒಳ್ಳೆಯ ಅಭ್ಯರ್ಥಿ"ಯನ್ನು ಕಣಕ್ಕಿಳಿಸಿದರೆ ನಾನು ಸ್ಪರ್ಧೆಯಿಂದ ಹಿಂದೆ ಸರಿಯಲು ಸಿದ್ಧ. ಪಕ್ಷವನ್ನು ತೊರೆಯುವ ನಿರ್ಧಾರವು "ಅತ್ಯಂತ ಕಠಿಣ ನಿರ್ಧಾರ"ವಾಗಿತ್ತು. ಕ್ರಿಮಿನಲ್ ಹಿನ್ನೆಲೆ ಇಲ್ಲದ ಯಾವುದೇ ಉತ್ತಮ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಿದ್ದರೆ ನಾನು ಬಿಜೆಪಿ ತೊರೆಯುತ್ತಿರಲಿಲ್ಲ. ಬದಲಿಗೆ ಖುದ್ದು ನಾನೇ ನಿಂತು ಪ್ರಚಾರ ಮಾಡಿ ಮತ ನೀಡುವಂತೆ ಕೇಳುತ್ತಿದ್ದೆ ಎಂದು ಹೇಳಿದ್ದಾರೆ.