ದೆಹಲಿ ಸಿಎಂ ಕೇಜ್ರಿವಾಲ್ ಮನೆ ಮೇಲೆ ದಾಳಿ ಪ್ರಕರಣ; ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿಚಾರಣೆ

ಮಾರ್ಚ್‌ನಲ್ಲಿ ಪ್ರತಿಭಟನೆ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ಮಂಗಳವಾರ ಎರಡು ಗಂಟೆಗಳ...
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ

ನವದೆಹಲಿ: ಮಾರ್ಚ್‌ನಲ್ಲಿ ಪ್ರತಿಭಟನೆ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ಮಂಗಳವಾರ ಎರಡು ಗಂಟೆಗಳ ಕಾಲ ತೀವ್ರ ವಿಚಾರಣೆ ನಡೆಸಿದರು. 31 ವರ್ಷದ ತೇಜಸ್ವಿ ಸೂರ್ಯ ಅವರನ್ನು 10 ದಿನಗಳ ಹಿಂದೆ ಪ್ರತಿಭಟನೆಯಲ್ಲಿ ಅವರ ಪಾತ್ರದ ಕುರಿತು ವಿಚಾರಣೆ ನಡೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈಗ ಎರಡನೇ ಬಾರಿ ವಿಚಾರಣೆ ಒಳಪಡಿಸಿದ್ದಾರೆ.

ಕೇಜ್ರಿವಾಲ್ ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಹಲವಾರು ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಭೇದಿಸಿ ಕೇಜ್ರಿವಾಲ್ ಮನೆ ಮೇಲೆ ದಾಳಿ ನಡೆಸಿದ್ದರು.

ಮಾರ್ಚ್ 30 ರಂದು ವಿವಾದಾತ್ಮಕ ಚಲನಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಕುರಿತು ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಗಳನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.  ಕೇಜ್ರಿವಾಲ್ ನಿವಾಸದ ಬಳಿ ಘೋಷಣೆ ಕೂಗಿದ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ, ಗೇಟ್‌ಗಳಿಗೆ ಬಣ್ಣ ಎಸೆದಿದ್ದರು. ಅಲ್ಲದೆ ಸಿಸಿಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿ ಸೂರ್ಯ ಅವರಿಗೆ ಪೊಲೀಸರು ಎರಡು ಬಾರಿ ನೋಟಿಸ್ ನೀಡಿದ್ದರು. ನಾನು ದೆಹಲಿಯಲ್ಲಿದ್ದಾಗ ವಿಚಾರಣೆ ಎದುರಿಸಲು ಸಿದ್ಧ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪೊಲೀಸರಿಗೆ ತಿಳಿಸಿದ್ದರು.

ತೇಜಸ್ವಿ ಸೂರ್ಯ ಅವರನ್ನು ಅಶೋಕ್ ರಸ್ತೆಯಲ್ಲಿರುವ ಅವರ ಅಧಿಕೃತ ನಿವಾಸದಲ್ಲಿ ಜೂನ್ ಕೊನೆಯ ವಾರದಲ್ಲಿ ಪ್ರಶ್ನಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ. ತೇಜಸ್ವಿ ಸೂರ್ಯ ನೇತೃತ್ವದ ಭಾರತೀಯ ಜನತಾ ಯುವ ಮೋರ್ಚಾದ ಎಂಟು ಸದಸ್ಯರನ್ನು ಪ್ರತಿಭಟನೆ ಸಮಯದಲ್ಲಿ ಬಂಧಿಸಲಾಗಿತ್ತು.

ಕೇಜ್ರಿವಾಲ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಾಗದ ಕಾರಣ ಬಿಜೆಪಿ ಕಾರ್ಯಕರ್ತರು ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈ ಹಿಂದೆ ಆರೋಪಿಸಿದ್ದರು. ಬಿಜೆಪಿಯು ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಿಲ್ಲ, ಆದ್ದರಿಂದ ಅವರು ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಸೋಡಿಯಾ ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com