PTI
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೋವಿಡ್-19 ಪಾಸಿಟಿವ್ ಆಗಿದೆ ಮತ್ತು ವೈದ್ಯರ ಸಲಹೆಯ ಮೇರೆಗೆ ಅವರು ತಮ್ಮ ನಿವಾಸದಲ್ಲಿ ಪ್ರತ್ಯೇಕ ವಾಸದಲ್ಲಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಕಳೆದ ಜನವರಿಯಲ್ಲಿ ಕೂಡ ನಿತೀಶ್ ಕುಮಾರ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು ಎಂದು ಅವರು ತಿಳಿಸಿದ್ದಾರೆ.
ವೈದ್ಯರ ಸಲಹೆಯ ಮೇರೆಗೆ ಅವರು ತಮ್ಮ ನಿವಾಸದಲ್ಲಿ ಪ್ರತ್ಯೇಕವಾಗಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಅವರು ಆರೋಗ್ಯವಾಗಿರಲಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ: 14, 830 ಹೊಸ ಪ್ರಕರಣ ಪತ್ತೆ, 36 ಸೋಂಕಿತರು ಸಾವು
ಕಳೆದ ಎರಡು ಮೂರು ದಿನಗಳಲ್ಲಿ ತನ್ನೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ ಎಂದು ಸಿಎಂ ಮನವಿ ಮಾಡಿದ್ದಾರೆ.
ಸೋಮವಾರ ದೆಹಲಿಯಲ್ಲಿ ನಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಿತೀಶ್ ಕುಮಾರ್ ಹಾಜರಾಗಬೇಕಿತ್ತು. ಆದರೆ, ಅನಾರೋಗ್ಯದ ಕಾರಣದಿಂದಾಗಿ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ದೇಶದಲ್ಲಿಂದು ಕಳೆದ 24 ಗಂಟೆಗಳ ಅವಧಿಯಲ್ಲಿ 14, 830 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 36 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 5, 26,110ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.