ನ್ಯಾಷನಲ್ ಹೆರಾಲ್ಡ್ ಪ್ರಕರಣ: 3ನೇ ಸುತ್ತಿನ ವಿಚಾರಣೆಗೆ ಇ.ಡಿ ಕಚೇರಿಗೆ ಆಗಮಿಸಿದ ಸೋನಿಯಾ ಗಾಂಧಿ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ದೆಹಲಿಯ ಜಾರಿ ನಿರ್ದೇಶನಾಲಯದ (ಇ.ಡಿ) ಕಚೇರಿಗೆ ಹಾಜರಾಗಿದ್ದಾರೆ.
ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೆ ಇ.ಡಿ ಕಚೇರಿಗೆ ಆಗಮಿಸಿದ ಸೋನಿಯಾ ಗಾಂಧಿ
ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೆ ಇ.ಡಿ ಕಚೇರಿಗೆ ಆಗಮಿಸಿದ ಸೋನಿಯಾ ಗಾಂಧಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಕಚೇರಿಗೆ ಹಾಜರಾಗಿದ್ದಾರೆ.

ಬೆಳಗ್ಗೆ 11ರ ಸುಮಾರಿಗೆ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಸೋನಿಯಾ ಗಾಂಧಿ ಅವರು ಇ.ಡಿ. ಕಚೇರಿಗೆ ಆಗಮಿಸಿದರು. ಮಂಗಳವಾರ ಸುಮಾರು ಆರು ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದ ಸೋನಿಯಾ ಅವರಿಗೆ ಬುಧವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಅಧಿಕಾರಿಗಳು ಸೂಚಿಸಿದ್ದರು. ಅದರಂತೆ ಸೋನಿಯಾ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಈ ಮಧ್ಯೆ, ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇ.ಡಿ ಪ್ರಶ್ನಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿಯಿಂದ ಇ.ಡಿ ದುರ್ಬಳಕೆಯಾಗುತ್ದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರವೂ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.

ಗುಲಾಂ ನಬಿ ಆಜಾದ್, ಜೈರಾಮ್ ರಮೇಶ್ ಮತ್ತು ಆನಂದ್ ಶರ್ಮಾ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, 'ಮೊದಲು ಅವರು ರಾಹುಲ್ ಗಾಂಧಿಯನ್ನು ಕರೆಸಿ, ಐದು ದಿನಗಳಲ್ಲಿ ಹಲವಾರು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಇದೀಗ ಸೋನಿಯಾ ಗಾಂಧಿ ಅವರನ್ನು ಇಂದು ಮೂರನೇ ಬಾರಿಗೆ ಕರೆಸಲಾಗಿದೆ. ಇದು ಎಷ್ಟು ಕಾಲ ನಡೆಯುತ್ತದೆ ಎಂದು ನಮಗೆ ತಿಳಿದಿಲ್ಲ. ದೇಶದಲ್ಲಿ ಆಗುತ್ತಿರುವ ಇ.ಡಿ ಭಯೋತ್ಪಾದನೆಯ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಮಾನವಾಗಬೇಕಿದೆ' ಎಂದು ತಿಳಿಸಿದರು.

ಮಂಗಳವಾರ ಇ.ಡಿ ವಿಚಾರಣೆಗೆ ಹಾಜರಾಗಿದ್ದ ಸೋನಿಯಾ ಗಾಂಧಿ ಅವರನ್ನು ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ತನಿಖೆಯಲ್ಲಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಭಾಗಿಯಾಗಿರುವ ಬಗ್ಗೆ ಸುಮಾರು 30 ಪ್ರಶ್ನೆಗಳಿಗೆ ಪ್ರತಿಕ್ರಿಯೆಯನ್ನು ಕೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಲ್ಲಿರುವ ಇ.ಡಿ ಕಚೇರಿಯಲ್ಲಿ 11 ಗಂಟೆಗೆ ಪ್ರಾರಂಭವಾದ ವಿಚಾರಣೆ ಸುಮಾರು 2.5 ಗಂಟೆಗಳ ಕಾಲ ನಡೆಯಿತು. 90 ನಿಮಿಷಗಳ ಊಟದ ವಿರಾಮದ ನಂತರ ಸಂಜೆ 7 ರವರೆಗೆ ಮುಂದುವರೆಯಿತು. ಹೆಚ್ಚುವರಿ ನಿರ್ದೇಶಕಿ ಮೋನಿಕಾ ಶರ್ಮಾ ನೇತೃತ್ವದ ತಂಡ ಸೋನಿಯಾ ಅವರ ವಿಚಾರಣೆ ನಡೆಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com