
ಯೋಗಿ ಆದಿತ್ಯನಾಥ್
ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿ ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದು, ಹೋಳಿ ಹಬ್ಬದ ಬಳಿಕ ಸರ್ಕಾರ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಉತ್ತರ ಪ್ರದೇಶದ ಹಂಗಾಮಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆಂದು ವರದಿಗಳು ತಿಳಿಸಿವೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಗೆಲುವಿನ ನಂತರ ಯೋಗಿ ಆದಿತ್ಯನಾಥ್ ಅವರು, ಶುಕ್ರವಾರ ಲಖನೌದ ಪಕ್ಷದ ಕಚೇರಿಯಲ್ಲಿ ತಮ್ಮ ಸಹೋದ್ಯೋಗಿಗಳೊಂದಿಗೆ ಸಭೆ ನಡೆಸಿ, ಮಾತುಕತೆ ನಡೆಸಿದ್ದರು.
ಉತ್ತರ ಪ್ರದೇಶದಲ್ಲಿ35 ಕ್ಷೇತ್ರಗಳಿಗೆ ಎಂಎಲ್ಸಿ ಆಯ್ಕೆ ಪ್ರಕ್ರಿಯೆಗೆ ಚುನಾವಣಾ ಆಯೋಗ ಚಾಲನೆ ನೀಡಿದೆ. ಅದರಂತೆ ಮಾ.15 ರಿಂದ ಮಾ.19ರೊಳಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬೇಕಿದೆ. ಏ.9ರಂದು ಮತದಾನ ನಡೆಯಲಿದ್ದು, ಏ.12ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಇದೆಲ್ಲವನ್ನೂ ಗಮನದಲ್ಲಿರಿಸಿಕೊಂಡು ನೂತನ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ಮಾರ್ಚ್ 19ಕ್ಕೂ ಮುನ್ನ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಿದೆ.
ಮಾರ್ಚ್ 18ರಂದು ಹೋಳಿ ಹುಣ್ಣಿಮೆ ಇರುವ ಹಿನ್ನೆಲೆಯಲ್ಲಿ, ಇದೇ ಶುಭ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್ ಅವರು 2ನೇ ಅವಧಿಗೆ ಸಿಎಂ ಗದ್ದುಗೆ ಏರುವ ಕುರಿತು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.