ಹೈದರಾಬಾದ್‌ನಲ್ಲಿ ಅಗ್ನಿ ಅವಘಡ: 11 ಮಂದಿ ಕಾರ್ಮಿಕರ ಸಜೀವ ದಹನ, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ತೆಲಂಗಾಣದ ರಾಜಧಾನಿ ಹೈದರಾಬಾದ್‌ನ ಭೋಯಿಗುಡಾದಲ್ಲಿನ ಸ್ಕ್ರ್ಯಾಪ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 11 ಕಾರ್ಮಿಕರು ಸಜೀವ ದಹನವಾಗಿದ್ದಾರೆಂದು ತಿಳಿದುಬಂದಿದೆ.
Published: 23rd March 2022 09:41 AM | Last Updated: 23rd March 2022 01:41 PM | A+A A-

ಅಗ್ನಿ ಅವಘಡ ಸಂಭವಿಸಿದ ಸ್ಥಳ.
ಹೈದರಾಬಾದ್: ತೆಲಂಗಾಣದ ರಾಜಧಾನಿ ಹೈದರಾಬಾದ್‌ನ ಭೋಯಿಗುಡಾದಲ್ಲಿನ ಸ್ಕ್ರ್ಯಾಪ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 11 ಕಾರ್ಮಿಕರು ಸಜೀವ ದಹನವಾಗಿದ್ದಾರೆಂದು ತಿಳಿದುಬಂದಿದೆ.
ಮೃತ ಕಾರ್ಮಿಕರೆಲ್ಲರೂ ಬಿಹಾರದ ನಿವಾಸಿಗಳಾಗಿದ್ದು, ಇಲ್ಲಿನ ಜಂಕ್ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಉಪಸ್ಥಿತರಿದ್ದ ಹೈದರಾಬಾದ್ ಕೇಂದ್ರ ವಲಯ ಡಿಸಿಪಿ, ಎಲ್ಲಾ 11 ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಮುಂಬೈನ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: 7 ಮಂದಿ ದುರ್ಮರಣ, 17ಕ್ಕೂ ಹೆಚ್ಚು ಮಂದಿಗೆ ಗಾಯ
ಬೆಳ್ಳಂಬೆಳಗ್ಗೆ ಸಿಕಂದರಾಬಾದ್ನಲ್ಲಿ ಟಿಂಬರ್ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಿಗೆ ಮತ್ತು ಬಿದಿರುಗಳು ಇರುವುದರಿಂದ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ. ಕೂಡಲೇ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ರವಾನಿಸಿದರು. ಸುದ್ದಿ ತಿಳಿದ ತಕ್ಷಣವೇ ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾರಂಭಿಸಿತು. ಆದರೆ ಅಷ್ಟೊತ್ತಿಗಾಗಲೇ 11 ಜನರು ಸಜೀವ ದಹನಗೊಂಡಿದ್ದರು. ಓರ್ವ ವ್ಯಕ್ತಿಯನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ. ಸದ್ಯ ಬೆಂಕಿ ಹತೋಟಿಗೆ ಬಂದಿದೆ. ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
ಈ ನಡುವೆ ದುರ್ಘಟನೆಗೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು, ತೀವ್ರ ಆಘಾತ ಹಾಗೂ ಬೇಸರ ವ್ಯಕ್ತಪಡಿಸಿದ್ದಾರೆ.
ಅಗ್ನಿ ಅವಘಡಕ್ಕೆ ಪ್ರಮುಖ ಕಾರಣಕ್ಕಾಗಿ ತನಿಖೆ ಆರಂಭವಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರಬಹುದು ಎಂದು ಶಂಕೆಗಳು ವ್ಯಕ್ತವಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದ್ದಾರೆ.