ಎರಡನೇ ಅವಧಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ನಾಳೆ ಪ್ರಮಾಣ ವಚನ, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಭಾಗಿ
ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಸಂಭ್ರಮದ ಪಾಳಯದಲ್ಲಿರುವ ಯೋಗಿ ಆದಿತ್ಯನಾಥ್ ನಾಳೆ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ.
Published: 24th March 2022 05:11 PM | Last Updated: 24th March 2022 06:28 PM | A+A A-

ಉತ್ತರ ಪ್ರದೇಶದಲ್ಲಿ ರಾರಾಜಿಸುತ್ತಿರುವ ಯೋಗಿ ಆದಿತ್ಯನಾಥ್ ಹೋರ್ಡಿಂಗ್ ಗಳು
ಲಖನೌ: ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಸಂಭ್ರಮದ ಪಾಳಯದಲ್ಲಿರುವ ಯೋಗಿ ಆದಿತ್ಯನಾಥ್ ನಾಳೆ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ.
ಲಖನೌನದಲ್ಲಿ ನಡೆಯಲಿರುವ ಅದ್ದೂರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ಆಡಳಿತದ ಮುಖ್ಯಮಂತ್ರಿಗಳು, ಮುಖೇಶ್ ಅಂಬಾನಿ ಸೇರಿದಂತೆ ಹಲವು ಉದ್ಯಮಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್, ಕಂಗನಾ ರಣಾವತ್ , ಬೋನಿ ಕಪೂರ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರಿಗೂ ಅಹ್ವಾನ ನೀಡಲಾಗಿದೆ.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಯೋಗಿ ಆದಿತ್ಯನಾಥ್ ಆಯ್ಕೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಯೋಗಿ ಆದಿತ್ಯನಾಥ್ ಸರ್ವಾನುಮತದಿಂದ ಆಯ್ಕೆಯಾದರು. ರಾಜ್ಯಪಾಲ ಆನಂದಿಬೆನ್ ಪಾಟೀಲ್ ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.
Lucknow | BJP's Yogi Adityanath elected as the Leader of the Legislative Party in Uttar Pradesh. pic.twitter.com/OocpizW9Pi
— ANI UP/Uttarakhand (@ANINewsUP) March 24, 2022
ಶುಕ್ರವಾರ ಸಂಜೆ 4 ಗಂಟೆಗೆ ಲಖನೌದ 50 ಸಾವಿರ ಜನರು ಕುಳಿತುಕೊಳ್ಳಬಹುದಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ಯೋಗ ಗುರು ಬಾಬಾ ರಾಮ್ ದೇವ್, ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ನಟ ಅನುಪಮ್ ಖೇರ್ ಸೇರಿದಂತೆ ವಿವಿಧ ಕ್ಷೇತ್ರಗಳ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶ: ನಾಲ್ಕು ಮಕ್ಕಳ ಜೀವ ತೆಗೆದ ಚಾಕಲೇಟ್; ಆಘಾತ ವ್ಯಕ್ತಪಡಿಸಿದ ಯೋಗಿ ಆದಿತ್ಯನಾಥ್!
ಈ ಮಧ್ಯೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಅವರ ಮಿತ್ರ ಪಕ್ಷ ಆರ್ ಎಲ್ ಡಿ ಮುಖ್ಯಸ್ಥ ಜಯಂತ್ ಚೌದರಿ, ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ಉಗ್ರ ನಿಗ್ರಹ ಪಡೆ, ವಿಶೇಷ ಕಾರ್ಯಪಡೆ ಸಿಬ್ಬಂದಿಯೊಂದಿಗೆ ಸುಮಾರು 8 ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 403 ಕ್ಷೇತ್ರಗಳ ಪೈಕಿ 255 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಂಡಿದ್ದು, ನಾಳೆ ಯೋಗಿ ಆದಿತ್ಯನಾಥ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.