ಗುಜರಾತ್ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿ ಹಲವು ಭರವಸೆ
ಗುಜರಾತ್ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ಸಮಾಜ ವಿರೋಧಿ ನಿಗ್ರಹ ದಳ ಸ್ಥಾಪನೆ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.
Published: 26th November 2022 03:16 PM | Last Updated: 26th November 2022 03:16 PM | A+A A-

ಬಿಜೆಪಿ ಪ್ರಣಾಳಿಕೆ ಬಿಡುಗಡೆ
ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ಸಮಾಜ ವಿರೋಧಿ ನಿಗ್ರಹ ದಳ ಸ್ಥಾಪನೆ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ಬಿಜೆಪಿ ‘ಸಂಕಲ್ಪ ಪತ್ರ’ ಎಂಬ ಹೆಸರಿನ ಪ್ರಣಾಳಿಕೆಯನ್ನು ಗಾಂಧಿನಗರದಲ್ಲಿರುವ “ಶ್ರೀ ಕಮಲಂ” ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮತ್ತು ಗುಜರಾತ್ ರಾಜ್ಯ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ಉಪಸ್ಥಿತರಿದ್ದರು.
ಇದನ್ನು ಓದಿ: ಚುನಾವಣಾ ಪ್ರಚಾರದಲ್ಲಿ ಮಕ್ಕಳ ದುರ್ಬಳಕೆ ಆರೋಪ: ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮೊದಲ ಬಾರಿಗೆ ಸಮಾಜ ವಿರೋಧಿ ನಿಗ್ರಹ ದಳ (ಆ್ಯಂಟಿ ರಾಡಿಕಲೈಸೇಶನ್ ಸೆಲ್) ಸ್ಥಾಪಿಸುವುದಾಗಿ ಭರವಸೆ ನೀಡಿದೆ.
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಜೆಪಿ ನಡ್ಡಾ, "ಸಂಭಾವ್ಯ ಬೆದರಿಕೆಗಳು ಮತ್ತು ಭಯೋತ್ಪಾದಕ ಸಂಘಟನೆಗಳನ್ನು, ಭಾರತ ವಿರೋಧಿ ಶಕ್ತಿಗಳ ಸ್ಲೀಪರ್ ಸೆಲ್‌ಗಳನ್ನು ಗುರುತಿಸಲು ಮತ್ತು ತೊಡೆದುಹಾಕಲು ನಾವು ಆಂಟಿ-ರ್ಯಾಡಿಕಲೈಸೇಶನ್ ಸೆಲ್ ಅನ್ನು ರಚಿಸುತ್ತೇವೆ ಎಂದು ಹೇಳಿದರು.
ಹೋರಾಟದ ಹೆಸರಿನಲ್ಲಿ ಸಾಮಾಜ ವಿರೋಧಿಗಳು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಹಾನಿ ಮಾಡಿದರೆ ಗಲಭೆಕೋರರಿಂದಲೇ ದಂಡ ವಸೂಲಿ ಮಾಡಲು ಗುಜರಾತ್ ವಸೂಲಾತಿ ಕಾಯ್ದೆಯನ್ನು ಜಾರಿಗೆ ತರುತ್ತೇವೆ. ಈ ಮೂಲಕ ಗಲಭೆಗಳು, ಹಿಂಸಾತ್ಮಕ ಪ್ರತಿಭಟನೆಗಳು, ಅಶಾಂತಿಯನ್ನು ತಡೆಯಲಾಗುವುದು ಎಂದು ನಡ್ಡಾ ತಿಳಿಸಿದರು.
ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಸುತ್ತೇವೆ. ಗುಜರಾತ್ ಏಕರೂಪ ನಾಗರಿಕ ಸಂಹಿತೆ ಸಮಿತಿಯ ಶಿಫಾರಸನ್ನು ಸಂಪೂರ್ಣ ಅನುಷ್ಠಾನಗೊಳಿಸುತ್ತೇವೆ ಎಂದು ಅವರು ಹೇಳಿದರು.