ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ: ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ
ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ಸ್ವೀಕಾರ ಮಾಡಿದರು.
ದೆಹಲಿಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಅಧಿಕಾರ ಹಸ್ತಾಂತರಿಸಿದ ಬಳಿಕ ಮಾತನಾಡಿದ ಸೋನಿಯಾ ಗಾಂಧಿಯವರು, ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಬದಲಾವಣೆ ಜಗದ ನಿಯಮ... ಕಾಂಗ್ರೆಸ್ ಈ ಹಿಂದೆಯೂ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿತ್ತು. ಆದರೆ, ಆ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ.
24 ವರ್ಷಗಳ ಬಳಿಕ ಗಾಂಧಿಯೇತರ ಕುಟುಂಬದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು, ಸಂಸದರು, ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು, ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಾಧ್ಯಕ್ಷರು ಮತ್ತು ಎಐಸಿಸಿಯ ಇತರ ಪದಾಧಿಕಾರಿಗಳು ಹಾಜರಿದ್ದಾರೆ.


