'ಏಕರೂಪ ನಾಗರಿಕ ಸಂಹಿತೆ' ವಿಚಾರ ಪ್ರಸ್ತಾಪ: ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ಗುಜರಾತ್‌ನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೇಜ್ರಿವಾಲ್
ಕೇಜ್ರಿವಾಲ್

ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ಗುಜರಾತ್‌ನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ತರಲು ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದು, ಇದರ ಬೆನ್ನಲ್ಲೇ ಆಡಳಿತಾರೂಢ ಪಕ್ಷದ ವಿರುದ್ಧ ಕೇಜ್ರಿವಾಲ್ ಕಿಡಿಕಾರಿದ್ದಾರೆ.

ಆಡಳಿತ ಪಕ್ಷವು ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅದೇ ಭರವಸೆಯನ್ನು ನೀಡಿತ್ತು. ಆದರೆ ಚುನಾವಣೆಯಲ್ಲಿ ಗೆದ್ದ ನಂತರ ಅದನ್ನು ಕಾರ್ಯಗತಗೊಳಿಸಲಿಲ್ಲ. ಬಿಜೆಪಿ ಉತ್ತರಾಖಂಡ ಚುನಾವಣೆಯಲ್ಲಿ ಗೆದ್ದ ನಂತರ ಸಮಿತಿಯನ್ನು ರಚಿಸಿತ್ತು. ಈಗ ಅದು ಕಣ್ಮರೆಯಾಗಿದೆ. ಈಗ ಅವರು ಗುಜರಾತ್ ಚುನಾವಣೆಗೆ ಮೂರು ದಿನಗಳ ಮೊದಲು ಸಮಿತಿಯನ್ನು ರಚಿಸಿದ್ದಾರೆ. ಅದು ಕೂಡ ಚುನಾವಣೆಯ ನಂತರವೂ ಕಣ್ಮರೆಯಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಬೇಕು. ಸಂವಿಧಾನದ 44 ನೇ ವಿಧಿಯು ಸಂಹಿತೆ ಜಾರಿ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಸ್ಪಷ್ಟವಾಗಿ ಹೇಳುತ್ತದೆ, ಆದರೆ, ಅದನ್ನು ಎಲ್ಲರ ಒಪ್ಪಿಗೆಯೊಂದಿಗೆ ಮಾಡಬೇಕು. ಎಲ್ಲಾ ಸಮುದಾಯಗಳೊಂದಿಗೆ ಸಮಾಲೋಚನೆ ನಡೆಸಿ ಮಾಡಬೇಕು ಎಂದು ಹೇಳಿದ್ದಾರೆ.

ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇದನ್ನು ಏಕೆ ಜಾರಿಗೊಳಿಸುವುದಿಲ್ಲ, ದೇಶದಾದ್ಯಂತ ಇದನ್ನು ಏಕೆ ಜಾರಿಗೊಳಿಸಬಾರದು. ಅವರು ಲೋಕಸಭೆ ಚುನಾವಣೆಗಾಗಿ ಕಾಯುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಏಕರೂಪ ನಾಗರಿಕ ಸಂಹಿತೆಯನ್ನು ಬಹುಸಂಖ್ಯಾತ ಹಿಂದೂಗಳ ಮತಗಳನ್ನು ಸೆಳೆಯುವ ಗಿಮಿಕ್ ಎಂದು ಟೀಕಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com