ಉತ್ತರ ಪ್ರದೇಶ: ಕಾನ್ಪುರ ಐಐಟಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಕಾನ್ಪುರದ ಐಐಟಿ ಹಾಸ್ಟೆಲ್ ನಲ್ಲಿ 32 ವರ್ಷದ ಪಿಎಚ್‌ಡಿ ವಿದ್ಯಾರ್ಥಿಯೊಬ್ಬ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Published: 07th September 2022 09:48 PM | Last Updated: 07th September 2022 09:53 PM | A+A A-

ಸಾಂದರ್ಭಿಕ ಚಿತ್ರ
ಕಾನ್ಪುರ: ಕಾನ್ಪುರದ ಐಐಟಿ ಹಾಸ್ಟೆಲ್ ನಲ್ಲಿ 32 ವರ್ಷದ ಪಿಎಚ್‌ಡಿ ವಿದ್ಯಾರ್ಥಿಯೊಬ್ಬ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದ ಪ್ರಶಾಂತ್ ಸಿಂಗ್ ಅವರು ಮಂಗಳವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಠಡಿಯಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸ್ ಕಮಿಷನರ್ ಬಿ ಪಿ ಜೋಗ್ದಂಡ್ ಅವರು ತಿಳಿಸಿದ್ದಾರೆ.
ಪ್ರಶಾಂತ್ ಸಿಂಗ್ ಅವರ ಕೊಠಡಿಯನ್ನು ಒಳಗಿನಿಂದ ಲಾಕ್ ಮಾಡಲಾಗಿದ್ದು, ಅವರಿಂದ ಯಾವುದೇ ಪ್ರತಿಕ್ರಿಯೆ ಬರುತ್ತಿಲ್ಲ ಎಂದು ಹಾಲ್ ನ 8ರ ನಿವಾಸಿಯೊಬ್ಬರು ಭದ್ರತಾ ವಿಭಾಗಕ್ಕೆ ಕರೆ ಮಾಡಿದ್ದರು ಎಂದು ಐಐಟಿ ಹೊರಡಿಸಿದ ಪ್ರಕಟಣೆ ತಿಳಿಸಿದೆ.
ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿಗಳು ಬಲವಂತವಾಗಿ ಬಾಗಿಲು ತೆರೆದಾಗ, ಸಿಂಗ್ ಬೆಡ್ ಶೀಟ್ ಸಹಾಯದಿಂದ ಸೀಲಿಂಗ್ ಫ್ಯಾನ್ ಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ ಎಂದು ಪ್ರಕಟಣೆ ಹೇಳಿದೆ.
ಸಿಂಗ್ ಅವರನ್ನು ಇನ್‌ಸ್ಟಿಟ್ಯೂಟ್‌ನ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ವಾರಣಾಸಿಯಲ್ಲಿ ವಾಸಿಸುವ ವಿದ್ಯಾರ್ಥಿಯ ಕುಟುಂಬ ಸದಸ್ಯರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.