ಹಣ ಅಕ್ರಮ ವರ್ಗಾವಣೆ ಪ್ರಕರಣ: ದೆಹಲಿಯಲ್ಲಿ ಇ.ಡಿ ಮುಂದೆ ಹಾಜರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರ ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿದ್ದಾರೆ. (ಫೋಟೋ | ಪಿಟಿಐ)
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರ ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿದ್ದಾರೆ. (ಫೋಟೋ | ಪಿಟಿಐ)

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

60 ವರ್ಷದ ಕಾಂಗ್ರೆಸ್ ಮುಖಂಡ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ತನಿಖಾ ಸಂಸ್ಥೆಯ ಕಚೇರಿಗೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ತಲುಪಿದರು. ಈ ವೇಳೆ ಅವರ ಜೊತೆಯಲ್ಲಿ ಕೆಲವರಿದ್ದರು.

ಡಿಕೆಶಿಗೆ ಕಳೆದ ವಾರ ಇ.ಡಿ ಸಮನ್ಸ್ ನೀಡಿತ್ತು. ಯಾವ ಪ್ರಕರಣದ ಸಂಬಂಧ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ಕೇಳಲಾಗಿದೆ ಎಂಬುದು ನನಗೆ ತಿಳಿದಿಲ್ಲ ಎಂದು ಅವರು ತಿಳಿಸಿದ್ದರು.

'ಭಾರತ್‌ ಜೋಡೋ ಯಾತ್ರೆ ಮತ್ತು ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಇಡಿ ಮತ್ತೊಮ್ಮೆ ನನಗೆ ಸಮನ್ಸ್‌ ನೀಡಿದೆ. ನಾನು ತನಿಖೆಗೆ ಸಹಕರಿಸಲು ಸಿದ್ಧ. ಆದರೆ, ಈ ಸಮನ್ಸ್‌ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ' ಎಂದು ಟ್ವಿಟರ್‌ನಲ್ಲಿ ಇ.ಡಿ ಸಮನ್ಸ್‌ ವಿರುದ್ಧ ಕಿಡಿಕಾರಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ 2019ರಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿ.ಕೆ. ಶಿವಕುಮಾರ್‌ ಮತ್ತು ಅವರ ಆಪ್ತರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ದೆಹಲಿಯ ಮನೆಯಲ್ಲಿ 8 ಕೋಟಿ ರೂ. ನಗದು ಪತ್ತೆಯಾಗಿತ್ತು. ಬಳಿಕ ಪ್ರಕರಣ ಇ.ಡಿಗೆ ವರ್ಗಾವಣೆಯಾಗಿತ್ತು. ನಂತರ ಇಡಿ ಅಧಿಕಾರಿಗಳು ಡಿಕೆಶಿ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವರ್ಷದ ಮೇ ತಿಂಗಳಲ್ಲಿ ಇ.ಡಿ ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು.

2019ರ ಸೆಪ್ಟೆಂಬರ್ 3 ರಂದು ಮತ್ತೊಂದು ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಇ.ಡಿ ಬಂಧಿಸಿತ್ತು ಮತ್ತು ಅದೇ ವರ್ಷ ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್ ಅವರಿಗೆ ಜಾಮೀನು ನೀಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com