

ದೆಹಲಿ: ಸುಲಭ್ ಇಂಟರ್‌ನ್ಯಾಷನಲ್ ಸ್ಥಾಪಕರೂ ಆದ ಸಾಮಾಜಿಕ ಕಾರ್ಯಕರ್ತ ಬಿಂದೇಶ್ವರ್ ಪಾಠಕ್ ಇಂದು ನಿಧನರಾದರು.
ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ತೊಡಗಿದ್ದ 80 ವರ್ಷದ ಪಾಠಕ್, ಏಕಾಏಕಿ ತೀವ್ರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸಲಾಯಿತು. ಆದರೆ ಹೃದಯಸ್ತಂಭನದಿಂದ ಅವರು ನಿಧನರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಸುಲಭ್ ಇಂಟರ್‌ನ್ಯಾಷನಲ್ ಸಂಸ್ಥೆಯನ್ನು ಸ್ಥಾಪಿಸಿ, ಶೌಚಾಲಯ ನಿರ್ಮಾಣ ಮಾಡುವ ಯೋಜನೆಯನ್ನು ಜಾರಿಗೆ ತಂದ ಹೆಗ್ಗಳಿಕೆಗೆ ಪಾಠಕ್ ಪಾತ್ರರಾಗಿದ್ದು, ಅನೇಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಪಾಠಕ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಪಾಠಕ್ ಅವರು ಸಮಾಜದ ಪ್ರಗತಿಗಾಗಿ ಮತ್ತು ದೀನದಲಿತರ ಸಬಲೀಕರಣಕ್ಕಾಗಿ ಸಾಕಷ್ಟು ಶ್ರಮಿಸಿದ್ದಾರೆ ಎಂದು ಮೋದಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.