ಉತ್ತರ ಪ್ರದೇಶ: ನದಿಗೆ ಉರುಳಿಬಿದ್ದ ಟ್ರ್ಯಾಕ್ಟರ್, ಒಂಬತ್ತು ಮಂದಿ ಸಾವು

ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ರೆಧಿಬೋಡ್ಕಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿಯೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ...
ರಕ್ಷಣಾ ಕಾರ್ಯಾಚರಣೆ
ರಕ್ಷಣಾ ಕಾರ್ಯಾಚರಣೆ

ಸಹರಾನ್‌ಪುರ/ಲಖನೌ: ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ರೆಧಿಬೋಡ್ಕಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿಯೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಸುಮಾರು 50 ಭಕ್ತರನ್ನು ಹೊತ್ತ ಟ್ರಾಕ್ಟರ್ ಧಾರ್ಮಿಕ ಕಾರ್ಯಕ್ರಮಕ್ಕಾಗಿ ರಾಂಡೌಲ್ ಗ್ರಾಮಕ್ಕೆ ತೆರಳುತ್ತಿದ್ದಾಗ ತಾಜಪುರ ಪ್ರದೇಶದಲ್ಲಿ ಬುಧವಾರ ಸಂಜೆ ಈ ಅಪಘಾತ ಸಂಭವಿಸಿದೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಅಭಿಮನ್ಯು ಮಾಂಗ್ಲಿಕ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಬುಧವಾರ ಪೊಲೀಸರು ನಾಲ್ಕು ಶವಗಳನ್ನು ನದಿಯಿಂದ ಹೊರತೆಗೆದಿದ್ದಾರೆ.

ಮೃತರನ್ನು ಸುಲೋಚನಾ(58), ಮಂಗಳೇಶ್ (50) ಮತ್ತು ಐದು ಮತ್ತು 12 ವರ್ಷದ ಅದಿತಿ ಹಾಗೂ ಅರ್ಜುನ್ ಎಂದು ಗುರುತಿಸಲಾಗಿದೆ.

ಗುರುವಾರ ಪತ್ತೆಯಾದ ಐದು ಶವಗಳನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಮಾಂಗ್ಲಿಕ್ ಅವರು ತಿಳಿಸಿದ್ದಾರೆ.

ಪ್ರವಾಹದಿಂದಾಗಿ ನದಿ ತುಂಬಿ ಹರಿಯುತ್ತಿದ್ದರಿಂದ ಹಲವರು ಕೊಚ್ಚಿಕೊಂಡು ಹೋಗಿದ್ದಾರೆ.

ನಾಪತ್ತೆಯಾದ ವ್ಯಕ್ತಿಯನ್ನು ಹೊರತರಲು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಹರಾನ್‌ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ.ದಿನೇಶ್ ಚಂದ್ ಮತ್ತು ಎಸ್‌ಎಸ್‌ಪಿ ಡಾ.ವಿಪಿನ್ ತಾಡಾ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಕ್ಷಣ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸಹರಾನ್‌ಪುರ ಜಿಲ್ಲಾ ಆಡಳಿತಕ್ಕೆ ಸೂಚಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com