4 ರಾಜ್ಯಗಳ ಚುನಾವಣೆ ಫಲಿತಾಂಶ: ಸಾರ್ವತ್ರಿಕ ಚುನಾವಣೆಗೆ ಮುನ್ನ ಬಿಜೆಪಿ, ಕಾಂಗ್ರೆಸ್ ಗೆ ಅಗ್ನಿ ಪರೀಕ್ಷೆ

ಇನ್ನು ಕೆಲವೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ.
ಬಿಜೆಪಿ-ಕಾಂಗ್ರೆಸ್
ಬಿಜೆಪಿ-ಕಾಂಗ್ರೆಸ್
Updated on

ನವದೆಹಲಿ: ಇನ್ನು ಕೆಲವೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ.

ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಮತ್ತು ಮಧ್ಯಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನಡುವೆ ಈ ಮೂರು ರಾಜ್ಯಗಳಲ್ಲಿ ನೇರ ಹಣಾಹಣಿ ಇದೆ. ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ.

ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ - ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ ಎಂದು ಹೇಳಿವೆ.

ಮಧ್ಯಪ್ರದೇಶದ 230, ಛತ್ತೀಸ್‌ಗಢದ 90, ತೆಲಂಗಾಣದ 119 ಮತ್ತು ರಾಜಸ್ಥಾನದ 199 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ನಾಳೆ ಬೆಳಗ್ಗೆ 8 ಗಂಟೆಗೆ  ಬಿಗಿ ಭದ್ರತೆಯ ನಡುವೆ ಅಂಚೆ ಮತಪತ್ರಗಳ ಎಣಿಸುವ ಮೂಲಕ ಮತ ಎಣಿಕೆ ಆರಂಭವಾಗಲಿದೆ. ಅಭ್ಯರ್ಥಿ ಸಾವನ್ನಪ್ಪಿದ ಕಾರಣ ರಾಜಸ್ಥಾನದಲ್ಲಿ ಒಂದು ಕ್ಷೇತ್ರದ ಮತದಾನವನ್ನು ಮುಂದೂಡಲಾಗಿದೆ.

ಮತ ಎಣಿಕೆಗೆ ಮೂರು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಪಾಸ್ ಹೊಂದಿರುವವರಿಗೆ ಮಾತ್ರ ಮತ ಎಣಿಕೆ ಕೇಂದ್ರಗಳಿಗೆ ಪ್ರವೇಶ ನೀಡಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಳೆದ ಮೇ ತಿಂಗಳಲ್ಲಿ ಬಿಜೆಪಿಯಿಂದ ಅಧಿಕಾರ ಕಿತ್ತುಕೊಂಡ ಕಾಂಗ್ರೆಸ್ ಈಗ, ಮಧ್ಯಪ್ರದೇಶ ಮತ್ತು ತೆಲಂಗಾಣದ ಮೇಲೆ ಕಣ್ಣಿಟ್ಟಿದೆ. ಅಲ್ಲದೆ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರ ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದೆ.

ಮಧ್ಯ ಪ್ರದೇಶದ 230 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ ಇದೆ. ಅದರಲ್ಲೂ, ಕಳೆದ ಬಾರಿ ಬಿಜೆಪಿಗಿಂತ ಹೆಚ್ಚಿನ ಸ್ಥಾನ ಪಡೆದಿದ್ದ ಕಾಂಗ್ರೆಸ್‌ಅನ್ನು ಬಿಜೆಪಿ ಓವರ್‌ಟೇಕ್‌ ಮಾಡಿ ಅಧಿಕಾರ ಹಿಡಿದಿದೆ. ಈಗ ಮತ್ತೆ ಬಹುಮತ ಸಾಧಿಸಿ ಅಧಿಕಾರದ ಗದ್ದುಗೆಯೇರಲು ಕಾಂಗ್ರೆಸ್‌ ಇನ್ನಿಲ್ಲದ ರಣತಂತ್ರ ರೂಪಿಸಿದೆ. ಮತ್ತೊಂದೆಡೆ, ಕಳೆದ ಬಾರಿ ಸಾಧಿಸದ ಬಹುಮತವನ್ನು ಈ ಬಾರಿ ಸಾಧಿಸುವ ಮೂಲಕ ಮತ್ತೆ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ಹಾಗಾಗಿ, ಈ ಬಾರಿಯ ಚುನಾವಣೆಯು ತೀವ್ರ ಹಣಾಹಣಿಯಿಂದ ಕೂಡಿದೆ.

ರಾಜಸ್ಥಾನದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ನೇರ ಹಣಾಹಣಿ ಇದೆ. ಅಶೋಕ್‌ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವದಲ್ಲಿದ್ದು, ಈ ಬಾರಿಯೂ ಗೆದ್ದು ಬೀಗುವ ಉತ್ಸಾಹದಲ್ಲಿದೆ. ಮತ್ತೊಂದೆಡೆ, 2018ರಲ್ಲಿ ಅಧಿಕಾರ ಕಳೆದುಕೊಂಡಿರುವ ಬಿಜೆಪಿಯು ಈ ಬಾರಿ ಗೆದ್ದು, ಮತ್ತೆ ಅಧಿಕಾರ ಪಡೆಯಲು ಯತ್ನಿಸುತ್ತಿದೆ. ಹಾಗಾಗಿಯೇ, ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್‌ ಹಾಗೂ ಬಿಜೆಪಿ ಜನರಿಗೆ ಉಚಿತ ಕೊಡುಗೆಗಳ ಮಹಾಪೂರವೇ ಹರಿಸಿವೆ. ಆದರೆ ಮತದಾರನ ಒಲವು ಯಾರ ಪರ ಇದೆ ಎಂಬುದು ನಾಳೆ ಬಹಿರಂಗವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com