
ಜೈಪುರ: ರಾಜಸ್ಥಾನ ನಿಯೋಜಿತ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಮಂಗಳವಾರ ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಮುಂದಿನ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.
ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಜನ್ ಲಾಲ್ ಶರ್ಮಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಬಳಿಕ ರಾಜಭವನಕ್ಕೆ ತೆರಳಿದ ಭಜನ್‌ಲಾಲ್ ಶರ್ಮಾ ಅವರು ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸಿಪಿ ಜೋಶಿ ಅವರು ರಾಜ್ಯಪಾಲರಿಗೆ ಪತ್ರ ಸಲ್ಲಿಸಿದ್ದು, ಶರ್ಮಾ ಅವರನ್ನು ರಾಜ್ಯದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶರ್ಮಾ ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕ ಮತ್ತು ಪಕ್ಷದ ಕೇಂದ್ರ ವೀಕ್ಷಕ ರಾಜನಾಥ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಇದ್ದರು.
ಈ ವೇಳೆ ನಿಯೋಜಿತ ಉಪಮುಖ್ಯಮಂತ್ರಿ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಕೂಡ ಉಪಸ್ಥಿತರಿದ್ದರು.
ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 69 ಸ್ಥಾನಗಳನ್ನು ಪಡೆದಿದೆ.
Advertisement