ಮಹಾರಾಷ್ಟ್ರ ಬಸ್‌ ದುರಂತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ರೂ.2 ಲಕ್ಷ, ರಾಜ್ಯ ಸರ್ಕಾರದಿಂದ ರೂ.5 ಲಕ್ಷ ಪರಿಹಾರ ಘೋಷಣೆ

ಮಹಾರಾಷ್ಟ್ರ ಭೀಕರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತಲಾ ರೂ.5 ಲಕ್ಷ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ.

ಮುಂಬೈ: ಮಹಾರಾಷ್ಟ್ರ ಭೀಕರ ಬಸ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತಲಾ ರೂ.5 ಲಕ್ಷ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ದುರ್ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು, ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಬಸ್‌ನ ಭೀಕರ ಅಪಘಾತದ ಅತ್ಯಂತ ದುಃಖವನ್ನು ತಂದಿದ್ದು, ಮೃತರ ಕುಟುಂಬಕ್ಕೆ ತೀವ್ರ ಸಂತಾಪವನ್ನು ಸೂಚಿಸುತ್ತೇನೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಅಲ್ಲದೆ, ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ.

ಘಟನೆ ಸಂಬಂಧ ಬುಲ್ಧಾನ ಕಲೆಕ್ಟರ್ ಮತ್ತು ಪೊಲೀಸ್ ಅಧೀಕ್ಷಕರೊಂದಿಗೆ ದೂರವಾಣಿ ಕರೆ ಮೂಲಕ ಸಂಪರ್ಕಿಸಲಾಗಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆಯಲಾಗಿದೆ. ಗಾಯಾಳುಗಳ ನೆರವಿನ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಗಾಯಾಳುಗಳಿಗೆ ಸರ್ಕಾರಿ ವೆಚ್ಚದಲ್ಲಿ ಕೂಡಲೇ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತ ತೀವ್ರ ದುಃಖ ತಂದಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳಲಿ. ಗಾಯಾಳುಗಳಿಗೆ ಸ್ಥಳೀಯ ಆಡಳಿತ ಮಂಡಳಿ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ, ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತ ಹೃದಯವಿದ್ರಾವಕ ಘಟನೆಯಾಗಿದೆ. ಈ ದುಃಖದ ಸಮಯದಲ್ಲಿ, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳಿಗೆ ಆಡಳಿತ ಮಂಡಳಿಯಿಂದ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಪುಣೆಗೆ ತೆರಳುತ್ತಿದ್ದ ವಿದರ್ಭ ಟ್ರಾವೆಲ್ಸ್‌ನ ಖಾಸಗಿ ಬಸ್‌ನಲ್ಲಿ ಬುಲ್ಧಾನ ಜಿಲ್ಲೆಯ ಪಿಂಪಲ್‌ಖುಟಾದಲ್ಲಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಸಾವನ್ನಪ್ಪಿರುವುದು ಅತ್ಯಂತ ಆಘಾತಕಾರಿ ಮತ್ತು ಹೃದಯ ವಿದ್ರಾವಕ ಘಟನೆಯಾಗಿದೆ. ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದು, ಅವರನ್ನು ಸಿಂಧಖೇದರಾಜ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರ ಕುಟುಂಬಕ್ಕೆ ಸಿಎಂ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.

ಜಿಲ್ಲಾಡಳಿತ ಹಾಗೂ ಪೊಲೀಸ್ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ. ಗಾಯಾಳುಗಳಿಗೆ ಎಲ್ಲಾ ರೀತಿಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com