

ನವದೆಹಲಿ: ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿಗೊಳಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ವಿಜ್ಞಾನಿಗಳ ಪರಿಶ್ರಮ ಮತ್ತು ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಚಂದ್ರಯಾನ-3 ಭಾರತದ ಬಾಹ್ಯಾಕಾಶ ಚರಿತ್ರೆಯಲ್ಲಿ ಹೊಸ ಅಧ್ಯಾಯ ಬರೆದಿದೆ. ಇದು ಎತ್ತರಕ್ಕೆ ಸಾಗುತ್ತಾ, ಪ್ರತಿ ಭಾರತೀಯನ ಕನಸು ಹಾಗೂ ಮಹತ್ವಾಕಾಂಕ್ಷೆಯನ್ನು ಮೇಲೆ ಕೊಂಡೊಯ್ಯುತ್ತಿದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ಅವಿರತ ಬದ್ಧತೆಗೆ ಸಾಕ್ಷಿ. ಅವರ ಉತ್ಸಾಹ ಮತ್ತು ದಕ್ಷತೆಗೆ ನಾನು ವಂದಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಟ್ವೀಟ್ ಮಾಡಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದು, ಚಂದ್ರಯಾನ-3 ಮಿಷನ್ ಯಶಸ್ವಿ ಉಡಾವಣೆಗಾಗಿ ಇಸ್ರೋಗೆ ಅಭಿನಂದನೆಗಳು. ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು. ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.