ಹುಸಿ ಬಾಂಬ್ ಕರೆ ಮಾಡಿದ ಗೋವಾ ವಿಮಾನ ನಿಲ್ದಾಣದ ಉದ್ಯೋಗಿಯ ಬಂಧನ

ವಿಮಾನ ನಿಲ್ದಾಣದಲ್ಲಿ ಬಾಂಬ್ ಇರುವುದಾಗಿ ಹುಸಿ ಕರೆ ಮಾಡಿದ ಆರೋಪದ ಮೇಲೆ ಗೋವಾದ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿರುವ 22 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಣಜಿ: ವಿಮಾನ ನಿಲ್ದಾಣದಲ್ಲಿ ಬಾಂಬ್ ಇರುವುದಾಗಿ ಹುಸಿ ಕರೆ ಮಾಡಿದ ಆರೋಪದ ಮೇಲೆ ಗೋವಾದ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿರುವ 22 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ 4.45ರ ಸುಮಾರಿಗೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಉತ್ತರ ಗೋವಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಧಿನ್ ವಲ್ಸನ್ ತಿಳಿಸಿದ್ದಾರೆ.

ಕರಾವಳಿ ರಾಜ್ಯದ ಎರಡೂ ವಿಮಾನ ನಿಲ್ದಾಣಗಳಾದ ಮೋಪಾ ಪ್ರದೇಶದ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ವಾಸ್ಕೋದ ದಾಬೋಲಿಮ್ ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಕರೆ ಮಾಡಲಾಗಿತ್ತು. ನಂತರ ಪರಿಶೀಲನೆ ನಡೆಸಿದಾಗ ಅದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದೆ ಎಂದು ಅವರು ಹೇಳಿದರು.

ಮೋಪಾ ಪೊಲೀಸರು ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಕುಂದನ್ ಕುಮಾರ್ ಎಂಬಾತನೇ ಕರೆ ಮಾಡಿರುವುದನ್ನು ಪತ್ತೆಹಚ್ಚಿದ್ದಾರೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಬಿಹಾರ ಮೂಲದ ಕುಂದನ್ ಕುಮಾರ್ ಅವರು ಮದ್ಯದ ಅಮಲಿನಲ್ಲಿ ಕರೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕುಂದನ್ ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 (1)(ಬಿ) (ಸಾರ್ವಜನಿಕರಿಗೆ ಭಯ ಉಂಟುಮಾಡುವುದು), 506 (ii) (ಕ್ರಿಮಿನಲ್ ಬೆದರಿಕೆ) ಮತ್ತು 507 (ಅನಾಮಧೇಯ ಸಂವಹನದಿಂದ ಅಪರಾಧ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಪ್ರಕರಣದ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com