

ನವದೆಹಲಿ: ಒಡಿಶಾದ ಬಾಲಸೋರ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ತುರ್ತು ಸಭೆ ನಡೆಸುತ್ತಿರುವ ಪ್ರಧಾನಿ ಮೋದಿಯವರು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ಪಡೆಯ ಮುಖ್ಯಸ್ಥರು, ರೈಲ್ವೇ ಸಚಿವಾಲಯ ಮುಖ್ಯಸ್ಥರು ಉಪಸ್ಥಿತರಿದ್ದರು,
ಲಭ್ಯವಿರುವ ದಾಖಲೆಗಳ ಪ್ರಕಾರ ಭಾರತದಲ್ಲಿ ನಡೆದ ನಾಲ್ಕನೇ ಮಾರಣಾಂತಿಕ ರೈಲು ಅಪಘಾತ ಇದಾಗಿದೆ. ಕೋಲ್ಕತ್ತಾದಿಂದ ದಕ್ಷಿಣಕ್ಕೆ 250 ಕಿಮೀ ಮತ್ತು ಭುವನೇಶ್ವರದಿಂದ 170 ಕಿಮೀ ಉತ್ತರಕ್ಕೆ ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ 7 ಗಂಟೆಗೆ ಈ ಅಪಘಾತ ಸಂಭವಿಸಿದೆ. ರೈಲ್ವೆ ಸಚಿವಾಲಯವು ತನಿಖೆಗೆ ಆದೇಶ ಹೊರಡಿಸಿದೆ.
ವರದಿಯ ಪ್ರಕಾರ, ಪ್ರಧಾನಿ ಮೋದಿ ಮೊದಲು ರೈಲು ಅಪಘಾತದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ನಂತರ ಗಾಯಾಳುಗಳು ದಾಖಲಾಗಿರುವ ಕಟಕ್ ನಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.
ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು–ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಕನಿಷ್ಠ 233 ಮಂದಿ ಮೃತಪಟ್ಟು, ಸುಮಾರು 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.