ವಿಪಕ್ಷಗಳ ಸಭೆಯಲ್ಲಿ ಮೆಹಬೂಬಾ ಮುಫ್ತಿ, ಫಾರೂಕ್ ಅಬ್ದುಲ್ಲಾ ಭಾಗಿ

ಬಿಜೆಪಿ ವಿರೋಧ ಪಕ್ಷಗಳ ಸಭೆಯಲ್ಲಿ ಕಾಶ್ಮೀರದ ಎರಡು ಪಕ್ಷಗಳಾದ ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕರು ಪಾಟ್ನಾಕ್ಕೆ ಬರುತ್ತಿದ್ದಾರೆ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪಾಟ್ನಾ: ಬಿಜೆಪಿ ವಿರೋಧ ಪಕ್ಷಗಳ ಸಭೆಯಲ್ಲಿ ಕಾಶ್ಮೀರದ ಎರಡು ಪಕ್ಷಗಳಾದ ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕರು ಪಾಟ್ನಾಕ್ಕೆ ಬರುತ್ತಿದ್ದಾರೆ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 23 ರಂದು ವಿಪಕ್ಷಗಳ ಸಭೆ ಪಾಟ್ನಾದಲ್ಲಿ ನಡೆಯಲಿದೆ. 2024ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ವಿರುದ್ಧದ ಕಾರ್ಯತಂತ್ರವನ್ನು ರೂಪಿಸಲು 18 ರಾಜಕೀಯ ಪಕ್ಷಗಳ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.

ಸಭೆಯಲ್ಲಿ ಪಾಲ್ಗೊಳ್ಳಲು 18 ಪಕ್ಷಗಳ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಕೂಡ ಸಭೆಯಲ್ಲಿ ಪಾಲ್ಗೊಳ್ಳಲು ಒಪ್ಪಿಕೊಂಡಿದ್ದಾರೆ" ಎಂದು ಲಾಲನ್ ತಿಳಿಸಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಐದು ರಾಜ್ಯಗಳ ಮುಖ್ಯಮಂತ್ರಿಗಳಾದ ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ದೆಹಲಿ ಮತ್ತು ತಮಿಳುನಾಡು ಉಪಸ್ಥಿತರಿರುವರು. ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಕೂಡ ಭಾಗವಹಿಸಲಿದ್ದಾರೆ.

ಇದಲ್ಲದೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಸೇರಿದಂತೆ ಕೆಲವು ರಾಜ್ಯಗಳ ಮಾಜಿ ಮುಖ್ಯಮಂತ್ರಿಗಳು ಕೂಡ ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ಒಪ್ಪಿಗೆ ನೀಡಿರುವ 18 ಪಕ್ಷಗಳಲ್ಲಿ ಕಾಂಗ್ರೆಸ್, ಆರ್‌ಜೆಡಿ, ಜೆಡಿ(ಯು), ಟಿಎಂಸಿ, ಸಿಪಿಐ, ಸಿಪಿಎಂ, ಸಿಪಿಐ-ಎಂಎಲ್, ಎಸ್‌ಪಿ, ಡಿಎಂಕೆ, ಎನ್‌ಸಿಪಿ, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಎಎಪಿ, ಎಚ್‌ಎಎಂ, ಭಾರತೀಯ ರಾಷ್ಟ್ರೀಯ ಲೋಕದಳ, ಶಿವಸೇನೆ (UBT) ಮತ್ತು ಜೆಎಂಎಂ ಪಕ್ಷಗಳಿವೆ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸಲು ಬಿಜೆಪಿಯೇತರ ಪಕ್ಷಗಳು ನಡೆಸುತ್ತಿರುವ ಮೊದಲ ಸಭೆ ಇದಾಗಿದೆ.

ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಶನಿವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿ ಸಭೆಗೆ ಆಹ್ವಾನಿಸಿದ್ದಾರೆ. ಉದ್ದೇಶಿತ ಸಭೆಯ ಸಿದ್ಧತೆಗಳ ಮೇಲ್ವಿಚಾರಣೆಗಾಗಿ ಲಾಲು ಪಾಟ್ನಾದಲ್ಲಿ ಮೊಕ್ಕಾಂ ಹೂಡಿದ್ದಾರೆ. ಭಾನುವಾರ, ರಾಜ್ಯ ರಾಜಧಾನಿಯಲ್ಲಿ ವಿರೋಧ ಪಕ್ಷಗಳ ಸಭೆಗೆ ಸಿದ್ಧತೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಜೂನ್ 12ರಂದು ಸಭೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಕೆಲ ಮುಖಂಡರಿಗೆ ಬಿಡುವಿಲ್ಲದ ಕಾರಣ  ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಸಭೆಯನ್ನು ಮುಂದೂಡಲಾಗಿತ್ತು. ಸಭೆಯ ದಿನಾಂಕವನ್ನು ಮುಂದೂಡುವಂತೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮನವಿ ಮಾಡಿದ್ದರು. ಮೇಲಾಗಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಕೂಡ ಅಂದು ಲಭ್ಯರಿರಲಿಲ್ಲ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com