ದೆಹಲಿ ಸಂಪುಟಕ್ಕೆ ಅತಿಶಿ, ಸೌರಭ್ ಭಾರದ್ವಾಜ್ ನೇಮಕಕ್ಕೆ ಕೇಜ್ರಿವಾಲ್ ಶಿಫಾರಸು

ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆಯಿಂದ ತೆರವಾಗಿದ್ದ ದೆಹಲಿ ಸಚಿವ ಸಂಪುಟದ ಎರಡು ಸ್ಥಾನಗಳಿಗೆ ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅತಿಶಿ ಮತ್ತು ಸೌರಭ್ ಭಾರದ್ವಾಜ್
ಅತಿಶಿ ಮತ್ತು ಸೌರಭ್ ಭಾರದ್ವಾಜ್

ನವದೆಹಲಿ: ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆಯಿಂದ ತೆರವಾಗಿದ್ದ ದೆಹಲಿ ಸಚಿವ ಸಂಪುಟದ ಎರಡು ಸ್ಥಾನಗಳಿಗೆ ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಅರವಿಂದ ಕೇಜ್ರಿವಾಲ್ ಅವರು, ಲೆಫ್ಟಿನೆಂಟ್ ಗವರ್ನರ್ ಅವರಿಗೆ ಈ ಎರಡು ಹೆಸರುಗಳನ್ನು ಕಳುಹಿಸಿಕೊಟ್ಟಿದ್ದಾರೆ ಎಂದು  ತಿಳಿದು ಬಂದಿದೆ,  ಹಗರಣದ ಆರೋಪ ಹೊತ್ತಿರುವ ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ನಿನ್ನೆ ತಮ್ಮ ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಹೀಗಾಗಿ, ಸರ್ಕಾರದ ನಿರ್ವಹಣೆ ದೃಷ್ಟಿಯಿಂದ ಇಬ್ಬರು ಶಾಸಕರ ಹೆಸರನ್ನು ಸಚಿವ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ.

ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಜಾರಿಯಲ್ಲಿ ಅಕ್ರಮ ಎಸಗಿರುವ ಆರೋಪದಡಿ ಭಾನುವಾರ ಮನೀಷ್ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು. ಜೈನ್ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಬಂಧಿಸಿದ್ದರು.

ತಡರಾತ್ರಿಯ ಪ್ರಕಟಣೆಯಲ್ಲಿ, ಕಂದಾಯ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಹಣಕಾಸು, ಪಿಡಬ್ಲ್ಯೂಡಿ, ವಿದ್ಯುತ್ ಮತ್ತು ಸಿಸೋಡಿಯಾ ಅವರ ಗೃಹ ಖಾತೆಯ ಹೆಚ್ಚುವರಿ ಉಸ್ತುವಾರಿ ನೀಡಲಾಗಿದೆ.  ಉಪಮುಖ್ಯಮಂತ್ರಿ ಬಳಿಯಿದ್ದ ಶಿಕ್ಷಣ, ಆರೋಗ್ಯ ಮತ್ತು ಸೇವೆಗಳಂತಹ ಇತರ ಖಾತೆಗಳನ್ನು ಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ಅವರಿಗೆ ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಗಿದೆ.

ಏತನ್ಮಧ್ಯೆ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರ ರಾಜೀನಾಮೆ ಪತ್ರಗಳನ್ನು ಸ್ವೀಕರಿಸಿದ್ದಾರೆ ಮತ್ತು ಅವುಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರವಾನಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳ ಆಡಳಿತದ ಕಾರ್ಯಸೂಚಿಯನ್ನು ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಇಬ್ಬರು ನಾಯಕರ ರಾಜೀನಾಮೆಯನ್ನು ಕೇಜ್ರಿವಾಲ್ ಅಂಗೀಕರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com