ಆರ್ಥಿಕ ಅಪರಾಧಿ: ವಿಜಯ್ ಮಲ್ಯ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ತನ್ನನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಿ, ತನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮುಂಬೈ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಈ ವಿಷಯದಲ್ಲಿ ಅರ್ಜಿದಾರರಿಂದ ಯಾವುದೇ ಸೂಚನೆಗಳನ್ನು ಪಡೆಯುತ್ತಿಲ್ಲ ಎಂದು ಮಲ್ಯ ಪರ ವಕೀಲರು ತಿಳಿಸಿದ ನಂತರ ಸುಪ್ರೀಂ ಕೋರ್ಟ್, ಮುಂಬೈ ಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ವಿಜಯ್ ಮಲ್ಯ ದೇಶದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಮುಂಬೈ ಕೋರ್ಟ್ ಘೋಷಣೆ ಮಾಡಿದ್ದು, ಅದರ ಪ್ರಕ್ರಿಯೆಯ ಭಾಗವಾಗಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕಿತ್ತು. ಆದರೆ, ತಮ್ಮನ್ನು ಆರ್ಥಿಕ ಅಪರಾಧಿ ಎಂದು ಘೋಷಿಸಿದ ಮುಂಬೈ ಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಈ ಮುಂಚೆ ಮಲ್ಯ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಈ ಸಂಬಂಧ ಜಾರಿ ನಿರ್ದೇಶನಾಲಯಕ್ಕೆ(ಇಡಿ) ನೋಟಿಸ್ ಜಾರಿ ಮಾಡಿತ್ತು. ಆದರೆ ವಿಜಯ್ ಮಲ್ಯ ಆರ್ಥಿಕ ಅಪರಾಧಿ ಎಂದು ಘೋಷಿಸಿದ್ದ ಮುಂಬೈನ ವಿಶೇಷ ಪಿಎಂಎಲ್‌ಎ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು.
ಜನವರಿ 5, 2019 ರಂದು, ಮುಂಬೈ ವಿಶೇಷ ನ್ಯಾಯಾಲಯ, ಪಿಎಂಎಲ್ಎ ಕಾಯ್ದೆಯಡಿ ವಿಜಯ್ ಮಲ್ಯ 'ಪರಾರಿ'ಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಿತ್ತು.