ರಾಜ್ಯಪಾಲರು ತಾವು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಮರೆಯಬಾರದು: ಸುಪ್ರೀಂ ಕೋರ್ಟ್

ರಾಜ್ಯಗಳು ಅದರಲ್ಲೂ ವಿಶೇಷವಾಗಿ ತಮಿಳುನಾಡು, ಕೇರಳ ಮತ್ತು ಪಂಜಾಬ್‌ನಂತಹ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳು ವಿಧಾನಸಭೆಯಲ್ಲಿ ಅಂಗೀಕರಿಸಿದ ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ರಾಜ್ಯಪಾಲರು ವಿಳಂಬ ಮಾಡುತ್ತಿರುವ...
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ರಾಜ್ಯಗಳು ಅದರಲ್ಲೂ ವಿಶೇಷವಾಗಿ ತಮಿಳುನಾಡು, ಕೇರಳ ಮತ್ತು ಪಂಜಾಬ್‌ನಂತಹ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳು ವಿಧಾನಸಭೆಯಲ್ಲಿ ಅಂಗೀಕರಿಸಿದ ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ರಾಜ್ಯಪಾಲರು ವಿಳಂಬ ಮಾಡುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕಳವಳ ವ್ಯಕ್ತಪಡಿಸಿದೆ. 

ಆಮ್ ಆದ್ಮಿ ಪಕ್ಷದ ನೇತೃತ್ವದ ಪಂಜಾಬ್ ಸರ್ಕಾರ, ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ವಿರುದ್ಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ, ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್‌ಗೆ ಬಂದ ನಂತರವೇ ರಾಜ್ಯಪಾಲರು ಕಾರ್ಯನಿರ್ವಹಿಸಬೇಕೆ? ಎಂದು ಪ್ರಶ್ನಿಸಿದರು. 

ತೆಲಂಗಾಣ ಸರ್ಕಾರದ ವಿಷಯದಲ್ಲೂ ಇದು ಆಗಿದೆ ಎಂದ ಸಿಜೆಐ, ರಾಜ್ಯಪಾಲರು ತಾವು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಮರೆಯಬಾರದು. ಮುಖ್ಯಮಂತ್ರಿ ಮತ್ತು ರಾಜ್ಯಪಾಲರು ಇಬ್ಬರೂ "ಸ್ವಲ್ಪ ಆತ್ಮಾವಲೋಕನ" ಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ತೆಲಂಗಾಣ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿದ ನಂತರ ಏಪ್ರಿಲ್ ನಲ್ಲಿ ಮಸೂದೆಗಳಿಗೆ ಅಂಕಿತ ಹಾಕಲಾಗುವುದು ಎಂದು ರಾಜ್ಯಪಾಲರು ಹೇಳಿರುವುದಾಗಿ ಪಂಜಾಬ್ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎ.ಎಂ.ಸಿಂಘ್ವಿ ಅವರು ತಿಳಿಸಿದರು.

ಈ ವಿಷಯಗಳು ಸುಪ್ರೀಂ ಕೋರ್ಟ್‌ಗೆ ಬರುವ ಮೊದಲೇ ರಾಜ್ಯಪಾಲರುಗಳು ಕ್ರಮ ತೆಗೆದುಕೊಳ್ಳಬೇಕು. ವಿಷಯ ಸುಪ್ರೀಂ ಕೋರ್ಟ್‌ಗೆ ಬಂದ ನಂತರ ರಾಜ್ಯಪಾಲರು ಕ್ರಮ ತೆಗೆದುಕೊಳ್ಳುವ ಸಂಪ್ರದಾಯ ನಿಲ್ಲಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದೇ ವೇಳೆ ಪಂಜಾಬ್ ರಾಜ್ಯಪಾಲರು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಷ್ಕೃತ ಸ್ಥಿತಿಗತಿ ವರದಿಯೊಂದನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾಗೆ ಸೂಚಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com