ಮಹಾರಾಷ್ಟ್ರ: ಮಹಿಳೆ ವಿವಸ್ತ್ರ ಪ್ರಕರಣ, ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ
ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿರುವ ಪ್ರಕರಣ ಕುರಿತು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ರೂಪಾಲಿ ಚಕಂಕರ್ ಭಾನುವಾರ ಒತ್ತಾಯಿಸಿದ್ದಾರೆ. ಈ ಸಂಬಂಧ ಬಿಜೆಪಿ ಎಂಎಲ್ಸಿಯ ಪತ್ನಿ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.
ಈ ಪ್ರಕರಣ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಚಕಂಕರ್, ಮಹಿಳೆಗೆ ನ್ಯಾಯ ಸಿಗುವವರೆಗೆ ಆಯೋಗ, ಹೋರಾಟ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.
"ಬೀಡು ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿರುವ ಬಗ್ಗೆ ತಿಳಿದು ಬಂದಿದೆ. ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿಯಿಂದ ಘಟನೆಯ ವಿವರಗಳನ್ನು ಖುದ್ದಾಗಿ ಕೇಳಿದ್ದೇನೆ. ಪ್ರಜಕ್ತ ಸುರೇಶ್ ಧಾಸ್, ರಘು ಪವಾರ್ ಮತ್ತು ರಾಹುಲ್ ಜಗದಾಳೆ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯು ಅತಿರೇಕದ ಸಂಗತಿಯಾಗಿದ್ದು, ಕೂಡಲೇ ಮುಂದಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಅವರು ಮಾಹಿತಿ ನೀಡಿದ್ದಾರೆ.
ತಮ್ಮ ಪತ್ನಿ ವಿರುದ್ಧದ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಎಂಎಲ್ ಸಿ ಸುರೇಶ್ ದಾಸ್, ದೂರು ರಾಜಕೀಯ ಪ್ರೇರಿತವಾಗಿದ್ದು, ಸೂಕ್ತ ಸಮಯದಲ್ಲಿ ಈ ಬಗ್ಗೆ ವಿವರವಾದ ಪ್ರತಿಕ್ರಿಯೆಯನ್ನು ನೀಡುತ್ತೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ