ರಾಜಸ್ಥಾನದಲ್ಲಿ ಇಡಿ ದಾಳಿ: ಸೋಲು ಖಚಿತ ಹಿನ್ನೆಲೆ ಬಿಜೆಪಿಯಿಂದ 'ಕೇಂದ್ರೀಯ ಸಂಸ್ಥೆ'ಗಳ ಅಸ್ತ್ರ ಪ್ರಯೋಗ; ಮಲ್ಲಿಕಾರ್ಜುನ ಖರ್ಗೆ ಕಿಡಿ

ಚುನಾವಣೆಯಲ್ಲಿ ಸೋಲು ಖಚಿತ ಎಂಬುದನ್ನು ಅರಿತಿರುವ ಬಿಜೆಪಿ, ತನ್ನ ಕೊನೆಯ ದಾಳವಾಗಿರುವ ಕೇಂದ್ರೀಯ ಸಂಸ್ಥೆಗಳನ್ನು ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.

ನವದೆಹಲಿ: ಚುನಾವಣೆಯಲ್ಲಿ ಸೋಲು ಖಚಿತ ಎಂಬುದನ್ನು ಅರಿತಿರುವ ಬಿಜೆಪಿ, ತನ್ನ ಕೊನೆಯ ದಾಳವಾಗಿರುವ ಕೇಂದ್ರೀಯ ಸಂಸ್ಥೆಗಳನ್ನು ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜಸ್ಥಾನ ಚುನಾವಣೆಯಲ್ಲಿ ಸೋಲು ಖಚಿತವಾದ ಹಿನ್ನೆಲೆ ಬಿಜೆಪಿ ತನ್ನ ಕೊನೆಯ ದಾಳವನ್ನು ಪ್ರಯೋಗಿಸಿದೆ. ಇಡಿ, ಸಿಬಿಐ, ಐಟಿಯನ್ನು ಬಳಕೆ ಮಾಡುತ್ತಿದೆ.  ಛತ್ತೀಸ್‌ಗಢದ ನಂತರ ರಾಜಸ್ಥಾನದ ಕಾಂಗ್ರೆಸ್‌ ನಾಯಕರ ವಿರುದ್ಧ ಇ.ಡಿ ದಾಳಿ ನಡೆದಿದೆ ಎಂದು ಹೇಳಿದ್ದಾರೆ.

‘ಮೋದಿ ಸರ್ಕಾರದ ಸರ್ವಾಧಿಕಾರ ಧೋರಣೆಯು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ತನಿಖಾ ಸಂಸ್ಥೆಗಳ ದುರುಪಯೋಗದ ವಿರುದ್ಧ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ಬಿಜೆಪಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ’ ಎಂದು ತಿಳಿಸಿದ್ದಾರೆ.

ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಮತ್ತು ಮಹುವಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಶಾಲಾ ಶಿಕ್ಷಣ ಖಾತೆಯ ಮಾಜಿ ಸಚಿವ ದೋತಸ್ರಾ ಅವರ ಸಿಕರ್ ಮತ್ತು ಜೈಪುರದ ನಿವಾಸ, ದೌಸಾದ ಮಹುವಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಓಂಪ್ರಕಾಶ್ ಹುಡ್ಲಾ ಮತ್ತು ಇತರ ಕೆಲವರ ನಿವಾಸಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ನಡೆಸುತ್ತಿದ್ದಾರೆ.

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ. ಚುನಾವಣೆಗೂ ಮುನ್ನ ಇಡಿ ದಾಳಿ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com