
ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುತ್ತದೆ ಮತ್ತು ಅದರ ಚುನಾವಣಾ ಭರವಸೆಗಳನ್ನು ಜಾರಿಗೆ ತರಲಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಅನುಷ್ಠಾನಗೊಳಿಸುತ್ತಿಲ್ಲ ಎಂಬ ಬಿಆರ್‌ಎಸ್ ಆರೋಪಗಳನ್ನು ತಳ್ಳಿಹಾಕಿದರು.
ಇಲ್ಲಿಗೆ ಸಮೀಪದ ತಾಂಡೂರು ಮತ್ತು ಪರಿಗಿಯಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು 10 ವರ್ಷಗಳ ಹಿಂದೆ ತೆಲಂಗಾಣ ರಾಜ್ಯಕ್ಕಾಗಿ ಜನರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿದ್ದಾರೆ. ಇದೀಗ ಮತದಾರರು ಅವರಿಗೆ ಕೃತಜ್ಞತೆ ಸಲ್ಲಿಸುವ ಸಮಯ ಬಂದಿದೆ ಎಂದರು.
ಯುಪಿಎ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಘೋಷಿಸಿದ ಭರವಸೆಗಳನ್ನು ಈಡೇರಿಸಿರುವುದನ್ನು ಉಲ್ಲೇಖಿಸಿದ ಅವರು, ಬಿಆರ್‌ಎಸ್ ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು 10 ವರ್ಷಗಳ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದಾರೆಯೇ ಎಂದು ಪ್ರಶ್ನಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ನೀಡಿದ್ದ ಭರವಸೆಗಳನ್ನೆಲ್ಲಾ ಈಡೇರಿಸಿದೆ ಎಂದರು.
ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರವು ಜನರಿಗೆ ನೀಡಿದ ಭರವಸೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ ಎಂಬ ಬಿಆರ್‌ಎಸ್ ಆರೋಪಗಳನ್ನು ಉಲ್ಲೇಖಿಸಿದ ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ಅವರ ಪುತ್ರ ಕೆಟಿ ರಾಮರಾವ್ ಅವರು ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲಿಸಬಹುದು ಎಂದರು.
'ನಾನು ಕೆಸಿಆರ್ ಮತ್ತು ಕೆಟಿಆರ್ ಅವರನ್ನು ಕೇಳುತ್ತಿದ್ದೇನೆ. ನಾನೇ ಬಸ್ ವ್ಯವಸ್ಥೆ ಮಾಡುತ್ತೇನೆ. ನೀವೆಲ್ಲರೂ ನಿಮ್ಮ ಸಚಿವರ ತಂಡದೊಂದಿಗೆ ಬನ್ನಿ. ನಾವು ಏನು ಭರವಸೆ ನೀಡಿದ್ದೆವೋ, ಅವುಗಳನ್ನು ಅನುಷ್ಠಾನ ಮಾಡಿದ್ದೇವೆ. ನಾವು ಚುನಾವಣಾ ಖಾತರಿಗಳನ್ನು ಅನುಷ್ಠಾನಗೊಳಿಸಿಲ್ಲ ಎಂದು ಆರೋಪಿಸಿದ್ದೀರಿ. ಆದರೆ, ಕರ್ನಾಟಕದಲ್ಲಿ ನಾವು ನೀಡಿದ್ದ ಭರವಸೆಗಳೆಲ್ಲಾ ಈಡೇರಿವೆ' ಎಂದು ಅವರು ಹೇಳಿದರು.
ತೆಲಂಗಾಣದ ಬಂಧುಗಳೆಲ್ಲ ಕರ್ನಾಟಕದಲ್ಲಿದ್ದಾರೆ. ಅವರನ್ನು ಕೇಳಿ. ನೀವು ಸಮಯ ಕೊಟ್ಟಾಗ, ನಾನು ನಿಮ್ಮೊಂದಿಗೆ ಬಂದು ಬಸ್ಸಿನಲ್ಲಿ ಕರೆದುಕೊಂಡು ಹೋಗಿ ಕರ್ನಾಟಕದ ಜನತೆಗೆ ಏನು ಮಾಡಿದ್ದೇವೆ ಎಂಬುದನ್ನು ತೋರಿಸಲು ಸಿದ್ಧ ಎಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ನೀಡಿದ ಐದು ಭರವಸೆಗಳಿಗಿಂತ, ತೆಲಂಗಾಣದಲ್ಲಿ ಕಾಂಗ್ರೆಸ್ ನೀಡಿದ ಆರು ಭರವಸೆಗಳು ಉತ್ತಮವಾಗಿವೆ ಎಂದು ಅವರು ಹೇಳಿದರು.
ಕಾಂಗ್ರೆಸ್ ನೀಡಿರುವ ಆರು ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ತಿಂಗಳಿಗೆ 2,500 ರೂ. ಮತ್ತು 500 ರೂ.ಗೆ ಗ್ಯಾಸ್ ಸಿಲಿಂಡರ್, ಹಾಗೆಯೇ ಎಲ್ಲಾ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ಸೇರಿವೆ.
ಇಡೀ ದೇಶವು ತೆಲಂಗಾಣದಲ್ಲಿ ಬದಲಾವಣೆಯನ್ನು ಬಯಸುತ್ತಿದೆ. ತೆಲಂಗಾಣವು ದೇಶದ ಅತ್ಯಂತ ಭ್ರಷ್ಟ ರಾಜ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ ಎಂದರು.
ತೆಲಂಗಾಣದಲ್ಲಿ ನವೆಂಬರ್ 30 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.
Advertisement