

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿನ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ನಾಯಕಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಶುಕ್ರವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.
ಮಾರ್ಚ್‌ನಲ್ಲಿ ಇಡಿ ಪ್ರಧಾನ ಕಛೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಕವಿತಾ ಅವರಿಗೆ ಮತ್ತೆ ಸೆಪ್ಟೆಂಬರ್ 15 ರಂದು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಪುತ್ರಿ ಕವಿತಾ ಅವರನ್ನು ಮಾರ್ಚ್ 11 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೊದಲು ಬಾರಿ ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.
ನಂತರ ಮಾರ್ಚ್ 16 ರಂದು ಅವರಿಗೆ ಮತ್ತೆ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಅರ್ಜಿಯನ್ನು ಉಲ್ಲೇಖಿಸಿ ವಿಚಾರಣೆಯಿಂದ ಹೊರಗುಳಿದಿದ್ದರು. ಈ ಮನವಿಯನ್ನು ತಿರಸ್ಕರಿಸಿದ್ದ ಇಡಿ ಅಧಿಕಾರಿಗಳು ಮಾರ್ಚ 20 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.