ಮುಸ್ಲಿಮರ ಮೀಸಲಾತಿ ರದ್ದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಮೀಸಲಾತಿ ರದ್ದುಗೊಳಿಸಿರುವುದರ ಸಂಬಂಧ ಪ್ರತಿಕ್ರಿಯೆ ನೀಡಲು ಕರ್ನಾಟಕ ಸರ್ಕಾರ ಸಮಯಾವಕಾಶ ಕೇಳಿದ್ದು, ಹೀಗಾಗಿ ಮೀಸಲಾತಿ ರದ್ದತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಏಪ್ರಿಲ್ 25ಕ್ಕೆ ಮುಂದೂಡಿದೆ. 
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಮೀಸಲಾತಿ ರದ್ದುಗೊಳಿಸಿರುವುದರ ಸಂಬಂಧ ಪ್ರತಿಕ್ರಿಯೆ ನೀಡಲು ಕರ್ನಾಟಕ ಸರ್ಕಾರ ಸಮಯಾವಕಾಶ ಕೇಳಿದ್ದು, ಹೀಗಾಗಿ ಮೀಸಲಾತಿ ರದ್ದತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಏಪ್ರಿಲ್ 25ಕ್ಕೆ ಮುಂದೂಡಿದೆ. 

ಒಕ್ಕಲಿಗರು ಮತ್ತು ಲಿಂಗಾಯತರಿಗೆ ಶಿಕ್ಷಣ ಸಂಸ್ಥೆಗಳ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಯಾವುದೇ ಕೋಟಾ ಪ್ರಯೋಜನಗಳನ್ನು ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಏಪ್ರಿಲ್ 13 ರಂದು ನೀಡಿದ್ದ ಭರವಸೆಯನ್ನು ಏಪ್ರಿಲ್ 25 ರವರೆಗೆ ಮುಂದುವರಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರಿದ್ದ ಪೀಠ ಹೇಳಿದೆ.

ಆರಂಭದಲ್ಲಿ, ರಾಜ್ಯ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸಲಿಂಗ ವಿವಾಹದ ಬಗ್ಗೆ ಸಾಂವಿಧಾನಿಕ ಪೀಠದ ಮುಂದೆ ನಾನು ವಾದಿಸಬೇಕಾಗಿದೆ. ಹೀಗಾಗಿ, ಈ ವಾರಾಂತ್ಯದಲ್ಲಿ ಮೀಸಲಾತಿ ರದ್ದು ವಿಷಯದ ಬಗ್ಗೆ ಪ್ರತಿಕ್ರಿಯೆಯನ್ನು ಸಲ್ಲಿಸುವುದಾಗಿ ಹೇಳಿದರು.

ಮೀಸಲಾತಿ ರದ್ದತಿಯನ್ನು ಪ್ರಶ್ನಿಸಿ ಕೆಲವು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ರಾಜ್ಯದ ಕೋರಿಕೆಗೆ ಆಕ್ಷೇಪ ವ್ಯಕ್ತಪಡಿಸುವುದಿಲ್ಲ. ಈ ವಾರಾಂತ್ಯದಲ್ಲಿ ಉತ್ತರವನ್ನು ನೀಡಲಾಗುವುದು. ಆದ್ದರಿಂದ ಮುಂದಿನ ವಿಚಾರಣೆಯ ದಿನಾಂಕದ ಮೊದಲು ಅದನ್ನು ಪರಿಶೀಲಿಸಬಹುದು ಎಂದು ಹೇಳಿದರು.

ನಂತರ ಪೀಠವು ಈ ಸಂಬಂಧ ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿತು.

ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ಏಪ್ರಿಲ್‌ 13ರಂದು ನಡೆಸಿದ್ದ ಸುಪ್ರೀಂ ಕೋರ್ಟ್, ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ದೋಷ ಪೂರಿತ, ಅಸ್ಥಿರ ಹಾಗೂ ಪ್ರಮಾದದಿಂದ ಕೂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿತ್ತು.‌

ಆಗ ರಾಜ್ಯ ಸರ್ಕಾರ, ಮಾರ್ಚ್‌ 27ರ ಆದೇಶದ ಆಧಾರದ ಮೇಲೆ ಯಾವುದೇ ಶೈಕ್ಷಣಿಕ ಸಂಸ್ಥೆಗಳಿಗೆ ಪ್ರವೇಶಾತಿ ನೀಡುವುದಿಲ್ಲ ಮತ್ತು ಯಾವುದೇ ಉದ್ಯೋಗಗಳಿಗೆ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ನೀಡಿತ್ತು. 

ಬಳಿಕ ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ನ್ಯಾಯಾಲಯ, ಸೋಮವಾರದೊಳಗೆ (ಏ.17) ಪ್ರತಿಕ್ರಿಯೆ ನೀಡುವಂತೆ ಸೂಚಿಸಿ, ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿತ್ತು.

ಮುಸ್ಲಿಮರಿಗೆ ಇದ್ದ ಶೇ 4ರಷ್ಟು ಮೀಸಲಾತಿಯನ್ನು ಕಿತ್ತುಕೊಂಡು, ಅದನ್ನು ಲಿಂಗಾಯತರಿಗೆ ಹಾಗೂ ಒಕ್ಕಲಿಗರಿಗೆ ತಲಾ ಶೇ 2ರಷ್ಟು ಹಂಚುವ ನಿರ್ಣಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಮಾರ್ಚ್‌ 27ರಂದು ಮಾಡಿತ್ತು. ಮುಸ್ಲಿಮರನ್ನು ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯಎಸ್‌) ಪಟ್ಟಿಗೆ ಸೇರಿಸುವ ನಿರ್ಧಾರವನ್ನೂ ತೆಗೆದುಕೊಂಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com