ದೇಶದಲ್ಲಿ ಕೊರೊನಾವೈರಸ್ ಪ್ರಕರಣಗಳ ಏರಿಕೆ; ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಕೋವಿಡ್ ಪಾಸಿಟಿವ್

ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಗುರುವಾರ ಕೋವಿಡ್ ಪಾಸಿಟಿವ್ ಆಗಿದ್ದು, ಸದ್ಯ ಅವರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ ಎನ್ನಲಾಗಿದೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಗುರುವಾರ ಕೋವಿಡ್ ಪಾಸಿಟಿವ್ ಆಗಿದ್ದು, ಸದ್ಯ ಅವರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ ಎನ್ನಲಾಗಿದೆ.
ವೈದ್ಯರ ತಂಡ ಅವರನ್ನು ಪರೀಕ್ಷಿಸಿ ಕೆಲವು ದಿನಗಳ ಕಾಲ ವಿಶ್ರಾಂತಿಗೆ ಶಿಫಾರಸು ಮಾಡಿದೆ.

ಅಧಿಕೃತ ಪ್ರಕಟಣೆಯ ಪ್ರಕಾರ, ಸಚಿವರಿಗೆ ಸದ್ಯ ಸೌಮ್ಯ ರೋಗಲಕ್ಷಣಗಳು ಕಂಡುಬಂದಿದ್ದು, ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

ರಾಜನಾಥ್ ಸಿಂಗ್ ಅವರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಭಾರತೀಯ ವಾಯುಪಡೆಯ ಕಮಾಂಡರ್‌ಗಳ ಸಮ್ಮೇಳನದಲ್ಲಿ ಭಾಗವಹಿಸಬೇಕಿತ್ತು. ಆದರೆ, ಕೋವಿಡ್ ಪಾಸಿಟಿವ್ ಆದ ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಬುಧವಾರ ಅವರು ಸೇನಾ ಕಮಾಂಡರ್‌ಗಳ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಇತರ ಹಿರಿಯ ಸೇನಾ ಅಧಿಕಾರಿಗಳೊಂದಿಗೆ ಇದ್ದರು.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,580 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,48,57,992ಕ್ಕೆ ಏರಿಕೆಯಾಗಿದೆ. ಕೋವಿಡ್‌ನಿಂದ ಸಾವಿಗೀಡಾಗಿರುವವರ ಒಟ್ಟು ಸಂಖ್ಯೆ 5,31,230ಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com