ಭಾರತದಲ್ಲಿ ಮತ್ತೆ ಶುರುವಾದ ಕೋವಿಡ್ ಆತಂಕ: ಕರ್ನಾಟಕ ಸೇರಿ 8 ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ!

ದಿನ ಕಳೆಯುತ್ತಿದ್ದಂತೆ ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆ ಆತಂಕಕ್ಕೆ ಕಾರಣವಾಗಿದೆ. ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಿಗೆ ಪತ್ರ ಬರೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ದಿನ ಕಳೆಯುತ್ತಿದ್ದಂತೆ ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆ ಆತಂಕಕ್ಕೆ ಕಾರಣವಾಗಿದೆ. ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಿಗೆ ಪತ್ರ ಬರೆದಿದೆ.

ಆರೋಗ್ಯ ಸಚಿವಾಲಯ ಕಾರ್ಯದರ್ಶಿಗಳಾದ ರಾಜೇಶ್ ಭೂಷಣ್ ಅವರು, ಎಂಟು ರಾಜ್ಯಗಳಿಗೆ ಪತ್ರ ಬರೆದಿದ್ದಾರೆ. ಕೋವಿಡ್‌ ಪಾಸಿಟಿವಿಟಿ ದರ ಹೆಚ್ಚಿರುವ ತಮಿಳುನಾಡು, ಉತ್ತರ ಪ್ರದೇಶ, ಹರಿಯಾಣ, ಕೇರಳ, ಮಹಾರಾಷ್ಟ್ರ, ರಾಜಸ್ಥಾನ, ದಿಲ್ಲಿ, ಕರ್ನಾಟಕಕ್ಕೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.

ಪತ್ರದಲ್ಲಿ ಕೋವಿಡ್‌ ಸೋಂಕಿಗೆ ಇನ್ನೂ ಅಂಕುಶ ಬಿದ್ದಿಲ್ಲ. ಎಚ್ಚರಿಕೆ ತಪ್ಪಿ ಅನಾಹುತಕ್ಕೆ ದಾರಿ ಮಾಡಿಕೊಡಬೇಡಿ. ಆದಷ್ಟು ಸೋಂಕು ಹರಡುವಿಕೆ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

''ಕೋವಿಡ್‌ ಸೋಂಕಿನ ಮೇಲೆ ತೀವ್ರ ನಿಗಾವಹಿಸಿ, ಉಸಿರಾಟದ ತೊಂದರೆ, ಜ್ವರ ಮಾದರಿಯ (ಐಎಲ್‌ಐ) ಪ್ರಕರಣಗಳ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸೂಚಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿ ಕೋವಿಡ್‌ ಸೋಂಕು ಅಪಾಯಕಾರಿ ಪರಿಸ್ಥಿತಿಯಲ್ಲಿ ಇಲ್ಲ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ಮರಣ ಪ್ರಮಾಣವೂ ಕಡಿಮೆ ಇದೆ. ಆದರೂ, ಕೆಲವು ಜಿಲ್ಲೆಗಳಲ್ಲಿ ಸೋಂಕಿನ ಪಾಸಿವಿಟಿ ಪ್ರಮಾಣ ಶೇ.10ರ ಗಡಿ ದಾಟಿದೆ. ಹೀಗಾಗಿ ಸೋಂಕು ವ್ಯಾಪಕವಾಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ.

ಸದ್ಯಕ್ಕೆ ದೇಶದ 63 ಜಿಲ್ಲೆಗಳಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೇ.10ರಷ್ಟಿದೆ. ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಪರೀಕ್ಷೆ ಪ್ರಮಾಣ ಹೆಚ್ಚಳ ಮಾಡಿ, ಹೊರಗಿನಿಂದ ಬರುವವರ ಮೇಲೆ ನಿಗಾವಹಿಸಿ, ಮಕ್ಕಳು, ವೃದ್ಧರು, ಗರ್ಭಿಣಿಯರು, ಬಾಣಂತಿಯರ ಆರೋಗ್ಯದ ಮೇಲೂ ಕಾಳಜಿ ವಹಿಸುವಂತೆ ನಿರ್ದೇಶಿಸಿದ್ದಾರೆ.

ಹೆಚ್ಚು ಹೆಚ್ಚು ಪರೀಕ್ಷೆ ನಡೆಸಿ ಮಾದರಿಗಳನ್ನು ಜಿನೋಮಿಕ್‌ ಸೀಕ್ವೆನ್ಸ್‌ ಕಳಿಸಿ. ಕ್ಲಸ್ಟರ್‌ ವಲಯವಾರು ರೋಗಿಗಳನ್ನ ಪತ್ತೆ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಶನಿವಾರದ ವರದಿಯಂತೆ ಭಾರತದಲ್ಲಿ 10,112 ಹೊಸ ಕೋವಿಡ್‌ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಸಕ್ರಿಯ ಕೇಸ್‌ಗಳ ಸಂಖ್ಯೆ 67,806ಕ್ಕೆ ಹೆಚ್ಚಳವಾಗಿದೆ.

ಚುನಾವಣಾ ಹೊಸ್ತಿಲಿನಲ್ಲಿರುವ ಕರ್ನಾಟಕದಲ್ಲಿ ನಿನ್ನೆ 100 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.2.83ಕ್ಕೆ ಹೆಚ್ಚಳಗೊಡಿದೆ.

ರಾಜ್ಯದಲ್ಲಿ ಮಾರ್ಚ್ ತಿಂಗಳಿಂದಲೂ ಸೋಂಕು ಏರಿಕೆಯಾಗುತ್ತಲೇ ಇದೆ. ಆದರೆ, ಪರಿಸ್ಥಿತಿ ಆತಂಕಕ್ಕೆ ಕಾರಣವಾಗಿಲ್ಲ. ಏಕೆಂದರೆ ಗುಣಮುಖ ಪ್ರಮಾಣ ಹೆಚ್ಚಿದೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಮಾತನಾಡಿ, ಕಳೆದ ಕೆಲವು ತಿಂಗಳುಗಳಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ನಿರಂತರ ಏರಿಕೆ ಕಂಡುಬರುತ್ತಿದೆ. ಆಸ್ಪತ್ರೆಗೆ ದಾಖಲಾದವರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಆದರೆ, ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವವರಲ್ಲಿ ಹೆಚ್ಚಿನ ಸಾವುಗಳು ಕಂಡು ಬರುತ್ತಿದೆ ಎಂದು ಹೇಳಿದ್ದಾರೆ.

ಕೋವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆಗಳು ಕಂಡು ಬಂದಿಲ್ಲ. ಇದು ಉತ್ತಮ ಬೆಳವಣಿಗೆಯಾಗಿದೆ. ಏಪ್ರಿಲ್ ತಿಂಗಳಿನಲ್ಲಿ ರಾಜ್ಯದಲ್ಲಿ ಈ ವರೆಗೂ 17 ಸಾವುಗಳು ಸಂಭವಿಸಿವೆ ಎಂದು ತಿಳಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ರಮೇಶ್ ಕೃಷ್ಣ ಅವರು ಮಾತನಾಡಿ, ಆಸ್ಪತ್ರೆಯಲ್ಲಿ ಕೋವಿಡ್ -19 ರೋಗಿಗಳಿಗೆ 50 ಹಾಸಿಗೆಗಳನ್ನು ಮೀಸಲಿಡಲಾಗಿದೆ, ಆದರೆ, ಕಳೆದ ಒಂದು ವಾರದಿಂದ ಯಾವುದೇ ಸೋಂಕಿತರು ದಾಖಲಾಗಿಲ್ಲ ಎಂದು ಹೇಳಿದ್ದಾರೆ.

ಫೋರ್ಟಿಸ್ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕಿ ಡಾ ಪ್ರಿಯಾ ಗೌತಮ್ ಅವರು ಮಾತನಾಡಿ, ಆಸ್ಪತ್ರೆಗೆ ದಾಖಲಾಗುತ್ತಿರುವವರ ಪ್ರಮಾಣದಲ್ಲಿ ಏರಿಕೆಗಳು ಕಂಡು ಬಂದಿಲ್ಲ. ಯಾವುದೇ ಪರಿಸ್ಥಿತಿ ನಿಭಾಯಿಸಲು ಎಲ್ಲಾ ಸೌಲಭ್ಯಗಳು ನಮ್ಮಲ್ಲಿವೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com