
ಸಾಗರ್: ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಮಧ್ಯ ಪ್ರದೇಶದ ಬುಂದೇಲ್‌ಖಂಡ್ ಪ್ರದೇಶದ ಸಾಗರ್‌ನಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಿದ ಖರ್ಗೆ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಶಿಫಾರಸಿನ ಮೇರೆಗೆ ಮಂಜೂರಾದ ಬುಂದೇಲ್‌ಖಂಡ್ ಪ್ಯಾಕೇಜ್ ಅನ್ನು ಬಿಜೆಪಿ ಸರ್ಕಾರ ಇದುವರೆಗೂ ಜಾರಿಗೆ ತಂದಿಲ್ಲ ಆರೋಪಿಸಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷರು, ಹಿಂಸಾಚಾರ ಪೀಡಿತ ಮಣಿಪುರಕ್ಕೆ ಕೇಂದ್ರ ಸರ್ಕಾರ ಏನನ್ನೂ ಮಾಡಿಲ್ಲ ಎಂದರು.
ಈ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಅವರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಸಂತ ರವಿದಾಸ್ ಅವರ ಸ್ಮಾರಕ ಮತ್ತು ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದನ್ನೂ ಟೀಕಿಸಿದ ಖರ್ಗೆ ಅವರು, ಪ್ರಧಾನಿ ಮೋದಿ ಚುನಾವಣಾ ಸಂದರ್ಭದಲ್ಲಿ ಮಾತ್ರ ಸಂತ ರವಿದಾಸರನ್ನು ನೆನಪಿಸಿಕೊಳ್ಳುತ್ತಾರೆ ಎಂದರು.
ಬಿಜೆಪಿ ಆಡಳಿತವಿರುವ ಮಧ್ಯ ಪ್ರದೇಶದಲ್ಲಿ ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆ ಇದೆ.
Advertisement