
ಮಧ್ಯಪ್ರದೇಶ: ಹಳೆ ದ್ವೇಷದ ಹಿನ್ನೆಲೆಯಲ್ಲಿ ದಲಿತ ಸಮುದಾಯದ ಯುವಕನೊಬ್ಬನನ್ನು ಜನರ ಗುಂಪೊಂದು ಥಳಿಸಿ ಕೊಂದು ಹಾಕಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಇದುವರೆಗೆ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಈ ಘಟನೆ ನಡೆದಿದ್ದು, ಪ್ರತಿಪಕ್ಷ ಕಾಂಗ್ರೆಸ್ ಮತ್ತು ಬಹುಜನ ಸಮಾಜ ಪಕ್ಷಗಳು ಭಾರತೀಯ ಜನತಾ ಪಕ್ಷದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಈ ಪ್ರಕರಣದಲ್ಲಿ ತ್ವರಿತವಾಗಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಬಿಜೆಪಿ ಹೇಳಿದೆ. ಈ ವರ್ಷಾಂತ್ಯದಲ್ಲಿ ಮಧ್ಯ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ಮೃತನನ್ನು ನಿತಿನ್ ಅಹಿರ್ವಾರ್ ಅಕಾ ಲಾಲು ಎಂದು ಗುರುತಿಸಲಾಗಿದೆ. ಈತನನ್ನು 18 ರಿಂದ 20 ವರ್ಷದೊಳಗಿನ ಗುಂಪು ಹೊಡೆದು ಕೊಂದು ಹಾಕಿದೆ. ನಂತರ ಪೊಲೀಸರು ಒಂಬತ್ತು ಮಂದಿ ಪರಿಚಿತರು ಹಾಗೂ ಮೂರ್ನಾಲ್ಕು ಮಂದಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಂಜೀವ್ ಉಯ್ಕೆ ಹೇಳಿದ್ದಾರೆ.
ಸಾಗರ್ ನಲ್ಲಿರುವ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ಯುವಕ ಸಾವನ್ನಪ್ಪಿದ್ದಾನೆ, ಅದರ ನಂತರ ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿ ಆರೋಪಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪೊಲೀಸ್ ದಾಖಲೆಗಳ ಪ್ರಕಾರ ಮೃತರು ಏಳು ಸುಲಿಗೆ, ಥಳಿತ ಮತ್ತು ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಹಳೆ ದ್ವೇಷದಿಂದ ಈ ಘಟನೆ ನಡೆದಿದ್ದು, ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿ ಮೃತನ ಕುಟುಂಬಸ್ಥರು ಆರಂಭದಲ್ಲಿ ಅಂತ್ಯ ಸಂಸ್ಕಾರ ನಡೆಸಿರಲಿಲ್ಲ.
Advertisement