ಇಂಡಿಯಾ ಮೈತ್ರಿಕೂಟದ ಸಭೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಗೈರು ಸಾಧ್ಯತೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಡಿಸೆಂಬರ್ 6 ರಂದು ದೆಹಲಿಯಲ್ಲಿ ನಡೆಯಲಿರುವ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದೆ.
ನಿತೀಶ್ ಕುಮಾರ್
ನಿತೀಶ್ ಕುಮಾರ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಡಿಸೆಂಬರ್ 6 ರಂದು ದೆಹಲಿಯಲ್ಲಿ ನಡೆಯಲಿರುವ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದೆ.

ನಿತೀಶ್ ಅವರು ಇತ್ತೀಚಿನ ದಿನಗಳಲ್ಲಿ ವೈರಲ್ ಜ್ವರದಿಂದ ಬಳಲುತ್ತಿರುವುದರಿಂದ ಮತ್ತು ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಹೀಗಾಗಿ, ಅವರು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಜೆಡಿಯು ಮೂಲಗಳು ತಿಳಿಸಿವೆ.

ಅವರ ಬದಲಿಗೆ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಸಿಂಗ್ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ಝಾ ಸೇರಿದಂತೆ ಇಬ್ಬರು ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಸೋಲು ಕಂಡ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 'ಇಂಡಿಯಾ' ಮೈತ್ರಿಕೂಟದ ಸಭೆಯನ್ನು ಕರೆದಿದ್ದಾರೆ.

ಇದಕ್ಕೂ ಮೊದಲು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸಭೆಗೆ ಹಾಜರಾಗುವುದಿಲ್ಲ ಎಂದು ಸುಳಿವು ನೀಡಿದ್ದಾರೆ. ಈಮಧ್ಯೆ, ವೈರಲ್ ಜ್ವರದಿಂದಾಗಿ ನಿತೀಶ್ ಕುಮಾರ್ ಕೂಡ ಇತ್ತೀಚಿನ ದಿನಗಳಲ್ಲಿ ಯಾವುದೇ ಅಧಿಕೃತ ಅಥವಾ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗುತ್ತಿಲ್ಲ.

ಕಳೆದ ವಾರ ನಳಂದಾ ಜಿಲ್ಲೆಯ ರಾಜಗೀರ್ ಮಹೋಸ್ತವ್‌ಗೆ ಹಾಜರಾಗಲು ಅವರಿಗೆ ಸಾಧ್ಯವಾಗಲಿಲ್ಲ. ಕೇಂದ್ರ ಸಚಿವ ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಅಧ್ಯಕ್ಷ ಜಿತನ್ ರಾಮ್ ಮಾಂಝಿ ಅವರಂತಹ ನಾಯಕರು ನಿತೀಶ್ ಕುಮಾರ್ ಅವರ ಆರೋಗ್ಯದ ಬಗ್ಗೆ ವೈದ್ಯಕೀಯ ಬುಲೆಟಿನ್ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ. 

ಈ ಹಿಂದೆ ಬಿಹಾರ ಕಾಂಗ್ರೆಸ್ ಅಧ್ಯಕ್ಷ ಮತ್ತು ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ಪ್ರಸ್ತಾವಿತ ಸಭೆಯಲ್ಲಿ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com