ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೋರಿ ಅರ್ಜಿ: ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ತೀರ್ಮಾನ

ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ  ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ  ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದೆ. 

ಶಾಲೆಯ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸುವ(Hijab row) ವಿಷಯದ ಕುರಿತು ಈ ಹಿಂದೆ ಸುಪ್ರೀಂ ಕೋರ್ಟ್‌(Supreme court) ಭಿನ್ನ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಿಕೊಂಡು ಬಂದರೆ ವಿದ್ಯಾರ್ಥಿನಿಯರಿಗೆ ಮಾರ್ಚ್ 9 ರಿಂದ ಪ್ರಾರಂಭವಾಗುವ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅನುಮತಿ ನೀಡಲಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ತಿಳಿಸಲಾಯಿತು. 

"ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಹೋದರೆ ಅವರನ್ನು ಪರೀಕ್ಷಾ ಹಾಲ್ ಒಳಗೆ ಕುಳಿತುಕೊಳ್ಳಲು, ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ. ವಿದ್ಯಾರ್ಥಿಗಳಿಗೆ ಸದ್ಯದಲ್ಲಿಯೇ ಪರೀಕ್ಷೆ ಇರುವುದರಿಂದ ಮುಂದಿನ ಸೋಮವಾರ ಅಥವಾ ಶುಕ್ರವಾರದಂದು ವಿಚಾರಣೆ ನಡೆಸಲು ನ್ಯಾಯಾಲಯವು ಪರಿಗಣಿಸಬಹುದು ಎಂದು ವಕೀಲ ಶಾದನ್ ಫರಾಸತ್ ಹೇಳಿದರು.

ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದರಿಂದ ಕೆಲವು ಹುಡುಗಿಯರು ಖಾಸಗಿ ಸಂಸ್ಥೆಗಳಿಗೆ ತೆರಳಿದ್ದಾರೆ, ಆದರೆ ಸರ್ಕಾರಿ ಸಂಸ್ಥೆಗಳಲ್ಲಿ ಪರೀಕ್ಷೆ ಬರೆಯಬೇಕಾಗಿದೆ ಎಂದು ಅವರು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು. ಅನುಮತಿ ನೀಡದಿದ್ದರೆ ಇನ್ನೊಂದು ವರ್ಷ ವಿದ್ಯಾರ್ಥಿನಿಯರು ತಮ್ಮ ಕಲಿಕಾ ವರ್ಷವನ್ನು ಕಳೆದುಕೊಳ್ಳುವ ಅಪಾಯವಿದೆ ಎಂದು ಅವರು ಹೇಳಿದರು. 

ಹಿಜಾಬ್ ಕುರಿತು ಭಿನ್ನ ತೀರ್ಪಿನಿಂದಾಗಿ, ಕರ್ನಾಟಕ ಹೈಕೋರ್ಟ್ ತೀರ್ಪನ್ನೇ ಇನ್ನೂ ಪರಿಗಣಿಸಲಾಗುತ್ತದೆ. ಕಳೆದ ವರ್ಷ ಅಕ್ಟೋಬರ್ 13 ರಂದು ವಿಭಜಿತ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಹಿಜಾಬ್ ವಿವಾದಕ್ಕೆ ಶಾಶ್ವತ ಪರಿಹಾರವನ್ನು ಅಂದು ನೀಡಲು ಸಾಧ್ಯವಾಗಿರಲಿಲ್ಲ. ವಿಭಜಿತ ತೀರ್ಪಿನ ಹಿನ್ನಲೆಯಲ್ಲಿ ಅಂದು ಇಬ್ಬರೂ ನ್ಯಾಯಾಧೀಶರು ವಿಷಯವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು. 

ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಪ್ರಕರಣದ ತೀರ್ಪು ನೀಡಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸುವುದಾಗಿ ಕಳೆದ ತಿಂಗಳು ಹೇಳಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com