ಮನೀಶ್ ಸಿಸೋಡಿಯಾ ಬಂಧನ: ಎಎಪಿ ಕೇಂದ್ರ ಕಚೇರಿ, ಸಿಬಿಐ ಕಚೇರಿಗೆ ಬಿಗಿ ಭದ್ರತೆ

ದೆಹಲಿ ಅಬಕಾರಿ ನೀತಿ ಹರಗಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ ನಂತರ ಎಎಪಿ ಕರೆ ನೀಡಿದ್ದ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಸೋಮವಾರ ಬೆಳಗ್ಗೆ ಕೇಂದ್ರ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಆಮ್ ಆದ್ಮಿ ಪಕ್ಷದ ಕೇಂದ್ರ ಕಚೇರಿಯ ಹೊರಗೆ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಎಎಪಿಯ ಕೇಂದ್ರ ಕಚೇರಿಯ ಎದುರು ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ
ಎಎಪಿಯ ಕೇಂದ್ರ ಕಚೇರಿಯ ಎದುರು ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹರಗಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ ನಂತರ ಎಎಪಿ ಕರೆ ನೀಡಿದ್ದ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಸೋಮವಾರ ಬೆಳಗ್ಗೆ ಕೇಂದ್ರ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಕೇಂದ್ರ ಕಚೇರಿಯ ಹೊರಗೆ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸಿಬಿಐ ಕಚೇರಿಗೆ ಕೂಡ ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಮೂರು ಪದರದ ಭದ್ರತಾ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಸೋಮವಾರ ಮಧ್ಯಾಹ್ನ ಸಿಸೋಡಿಯಾ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿರುವ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ಭಾರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ಪೊಲೀಸರ ಪ್ರಕಾರ, ಎಎಪಿಯ ಪ್ರತಿಭಟನೆಯ ನಂತರ, ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿ ಭಾರಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಹೀಗಾಗಿ, ನಗರದ ಮಧ್ಯ ಭಾಗದಲ್ಲೂ ಹಗಲಿನಲ್ಲಿ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮಗಳನ್ನು ಎಸಗಿದ್ದಾರೆ ಮತ್ತು ಅವರು 'ತನಿಖೆಗೆ ಸಹಕರಿಸಲಿಲ್ಲ' ಎಂದು ಆರೋಪಿಸಿ ಅವರನ್ನು ಬಂಧಿಸಲಾಗಿದೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಭಾನುವಾರ ತಿಳಿಸಿದೆ.

2021-22ರ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಮತ್ತು ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ನಂತರದ ಪ್ರಯೋಜನಗಳನ್ನು ನೀಡುವಲ್ಲಿನ ಆಪಾದಿತ ಅಕ್ರಮಗಳ ಬಗ್ಗೆ ತನಿಖೆಗಾಗಿ ಉಪಮುಖ್ಯಮಂತ್ರಿ ಮತ್ತು ಉಸ್ತುವಾರಿ ಅಬಕಾರಿ ಸಚಿವರು ಮತ್ತು ಇತರ 14 ಜನರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅದು ಹೇಳಿದೆ.

‘ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಅಂದಿನ ಅಬಕಾರಿ ಆಯುಕ್ತ ಅರ್ವಾ ಗೋಪಿ ಕೃಷ್ಣ, ಅಬಕಾರಿ ಇಲಾಖೆಯ ಅಂದಿನ ಉಪ ಆಯುಕ್ತ ಆನಂದ್ ತಿವಾರಿ ಮತ್ತು ಅಬಕಾರಿ ಇಲಾಖೆ ಸಹಾಯಕ ಆಯುಕ್ತ ಪಂಕಜ್ ಭಟ್ನಾಗರ್ 2021-22ನೇ ಸಾಲಿನ ಅಬಕಾರಿ ನೀತಿಗೆ ಸಂಬಂಧಿಸಿದ ಶಿಫಾರಸು ಮಾಡುವಲ್ಲಿ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ಸಿಬಿಐ ಆರೋಪಿಸಿದೆ.

ಸಿಬಿಐ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಮತ್ತು ಸಚಿವ ಗೋಪಾಲ್ ರೈ ಸೇರಿದಂತೆ 50 ಜನರನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com