
ಚೀನಾ ವಿದೇಶಾಂಗ ಸಚಿವ ಕಿನ್ ಗ್ಯಾಂಗ್
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ ಜಿ-20 ವಿದೇಶಾಂಗ ಸಚಿವರ ಸಭೆಯಲ್ಲಿ ಚೀನಾ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಈ ವಿಷಯ ದೃಢಪಡಿಸಿದ್ದಾರೆ. ಜಿ-20 ಜಾಗತಿಕ ಆರ್ಥಿಕತೆಯ ಪ್ರಮುಖ ಸವಾಲುಗಳ ಮೇಲೆ ಕೇಂದ್ರೀಕರಿಸಬೇಕು. ವಿದೇಶಾಂಗ ಸಚಿವರ ಸಭೆಯು ಬಹುಪಕ್ಷೀಯತೆಯ ಬಗ್ಗೆ ಸಕಾರಾತ್ಮಕ ಸಂಕೇತವನ್ನು ಕಳುಹಿಸುವುದನ್ನು ಖಚಿತಪಡಿಸಿಕೊಳ್ಳಲು ಚೀನಾ ಎಲ್ಲಾ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದರು.
ಭಾರತದ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ಮಾರ್ಚ್ 1-2 ರಂದು ಭೌತಿಕ ರೂಪದಲ್ಲಿ ಜಿ-20 ವಿದೇಶಾಂಗ ಸಚಿವರ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಜಿ- 20 ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದ್ದು, ಜಾಗತಿಕವಾಗಿ ಬೆಳೆಯುತ್ತಿರುವ ಭಾರತದ ಪ್ರಭಾವದ ಬಗ್ಗೆ ಮಾತನಾಡಲಿದ್ದಾರೆ ಎನ್ನಲಾಗಿದೆ.
ನವದೆಹಲಿಯ ಸಭೆಯಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್, ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಮತ್ತು ಯುಕೆ ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಕ್ಲೇವರ್ಲಿ ಭಾಗವಹಿಸಲಿದ್ದಾರೆ. ಒಟ್ಟಾರೆಯಾಗಿ, ಭಾರತದಿಂದ ಆಹ್ವಾನಿಸಲಾದ ಜಿ 20 ಸದಸ್ಯರಲ್ಲದ ಸದಸ್ಯರು ಮತ್ತು ಬಹುಪಕ್ಷೀಯ ಸಂಸ್ಥೆಗಳು ಸೇರಿದಂತೆ 40 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.