ಉನ್ನಾವೋ ಅತ್ಯಾಚಾರ ಪ್ರಕರಣದ ದೋಷಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ಮಧ್ಯಂತರ ಜಾಮೀನು!
2017ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.
Published: 16th January 2023 02:05 PM | Last Updated: 16th January 2023 03:04 PM | A+A A-

ಕುಲದೀಪ್ ಸಿಂಗ್ ಸೆಂಗಾರ್
ನವದೆಹಲಿ: 2017ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.
ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ದೆಹಲಿ ಕೋರ್ಟ್ ನಿಂದ ಸೋಮವಾರ ಮಧ್ಯಂತರ ಜಾಮೀನು ಸಿಕ್ಕಿದೆ. ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ತಂದೆಗೆ ಜಾಮೀನು ನೀಡುವಂತೆ ಸೆಂಗಾರ್ ಪುತ್ರಿ ಮನವಿ ಮೇರೆಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯವು ಕುಲದೀಪ್ ಸಿಂಗ್ ಸೆಂಗಾರ್ ಗೆ ಜನವರಿ 27ರಿಂದ ಫೆಬ್ರವರಿ 10ರವರೆಗೆ ಮಧ್ಯಂತರ ಜಾಮೀನು ನೀಡಿದೆ.
ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿ ಮತ್ತು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕುಲದೀಪ್ ಸಿಂಗ್ ಸೆಂಗಾರ್ ಅವರ ಮಗಳ ಮದುವೆ ಫೆಬ್ರವರಿಯಲ್ಲಿ ನಡೆಯಲಿದೆ. ಜ.18ರಿಂದ ಮಾಜಿ ಶಾಸಕರ ಮಗಳ ಮದುವೆ ಕಾರ್ಯಕ್ರಮ ಆರಂಭವಾಗಲಿದ್ದು ಫೆಬ್ರವರಿ 8ರಂದು ವಿವಾಹ ನಡೆಯಲಿದೆ.
ಇದನ್ನೂ ಓದಿ: ವಿರಾಟ್ ಕೊಹ್ಲಿ, ಎಂಎಸ್ ಧೋನಿ, ರೋಹಿತ್ ಶರ್ಮಾ ಪುತ್ರಿಯರ ವಿರುದ್ಧ ಆಕ್ಷೇಪಾರ್ಹ ಕಮೆಂಟ್; ಎಫ್‌ಐಆರ್ ದಾಖಲು
ಇನ್ನು 2019ರಲ್ಲಿ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಕಾರಿನಲ್ಲಿ ರಾಯ್ ಬರೇಲಿಗೆ ಹೋಗುತ್ತಿದ್ದಾಗ ಆಕೆಯ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿತ್ತು. ಇದಾದ ನಂತರ 2019ರ ಆಗಸ್ಟ್ 1ರಂದು ಸುಪ್ರೀಂ ಕೋರ್ಟ್ ಪ್ರಕರಣವನ್ನು ಉತ್ತರ ಪ್ರದೇಶದ ಕೆಳ ನ್ಯಾಯಾಲಯದಿಂದ ದೆಹಲಿಗೆ ವರ್ಗಾಯಿಸಿತು. ಕುಲದೀಪ್ ಸಿಂಗ್ ಸೆಂಗಾರ್ ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿದ್ದು, ಜೀವಾವಧಿ ಶಿಕ್ಷೆಯ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.