ಭಾರಿ ಮಳೆಗೆ ಉತ್ತರ ಭಾರತ ಜರ್ಝರಿತ: ಮೃತರ ಸಂಖ್ಯೆ 37ಕ್ಕೆ ಏರಿಕೆ, ಪರಿಹಾರ, ರಕ್ಷಣಾ ಕಾರ್ಯಾಚರಣೆ ತೀವ್ರ

ಕಳೆದೆರಡು ದಿನಗಳಲ್ಲಿ ಉಂಟಾದ ಭೂಕುಸಿತ  ಮತ್ತು ಇತರ ಮಳೆ ಸಂಬಂಧಿತ ಘಟನೆಗಳಲ್ಲಿ 37 ಜನರು ಸಾವನ್ನಪ್ಪಿದ್ದಾರೆ, ಸೇನೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಮುಂದಾಗಿವೆ.
ಭಾರೀ ಮಳೆಯಿಂದ ಉಕ್ಕಿ ಹರಿಯುತ್ತಿರುವ ಬಿಯಾಸ್ ನದಿ
ಭಾರೀ ಮಳೆಯಿಂದ ಉಕ್ಕಿ ಹರಿಯುತ್ತಿರುವ ಬಿಯಾಸ್ ನದಿ

ನವದೆಹಲಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಭಾರತ ಜರ್ಝರಿತಗೊಂಡಿದೆ. ಕೆಲ ಭಾಗಗಳಲ್ಲಿ ಸೋಮವಾರವೂ ಧಾರಾಕಾರ ಮಳೆಯಾಗಿದ್ದು, ಹೆಚ್ಚಿನ ಸಾವು ಮತ್ತು ವಿನಾಶವನ್ನು ಉಂಟುಮಾಡಿದೆ. ಕಳೆದೆರಡು ದಿನಗಳಲ್ಲಿ ಉಂಟಾದ ಭೂಕುಸಿತ  ಮತ್ತು ಇತರ ಮಳೆ ಸಂಬಂಧಿತ ಘಟನೆಗಳಲ್ಲಿ 37 ಜನರು ಸಾವನ್ನಪ್ಪಿದ್ದಾರೆ, ಸೇನೆ ಮತ್ತು ಎನ್‌ಡಿಆರ್‌ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಮುಖ್ಯಮಂತ್ರಿಗಳೊಂದಿಗೆ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದು, ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ಮತ್ತು ಬೆಂಬಲದ ಭರವಸೆ ನೀಡಿದ್ದಾರೆ. ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ್ದು, ದೇಶದ ಕೆಲವು ಭಾಗಗಳಲ್ಲಿ ಅತಿಯಾದ ಮಳೆಯ  ಪರಿಸ್ಥಿತಿಯನ್ನು ಅವಲೋಕಿಸಿದರು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ. 

ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ದಿನಗಳಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತದಿಂದ 18 ಜನರು ಸಾವನ್ನಪ್ಪಿದ್ದರೆ, ಪಂಜಾಬ್ ಮತ್ತು ಹರಿಯಾಣದಲ್ಲಿ 9 ಜನರು, ರಾಜಸ್ಥಾನದಲ್ಲಿ 7 ಮತ್ತು ಉತ್ತರ ಪ್ರದೇಶದಲ್ಲಿ ಮೂವರು ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ.  ದೆಹಲಿಯ ಯಮುನಾ ಸೇರಿದಂತೆ ಉತ್ತರ ಭಾರತದ ಹಲವಾರು ನದಿಗಳು ಉಕ್ಕಿ ಹರಿಯುತ್ತಿವೆ. 

ಭಾರೀ ಮಳೆ ಮತ್ತು ಪ್ರವಾಹವನ್ನು ನಿಭಾಯಿಸಲು ಒಟ್ಟು 39 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಉತ್ತರ ಭಾರತದ ನಾಲ್ಕು ರಾಜ್ಯಗಳಲ್ಲಿ ನಿಯೋಜಿಸಲಾಗಿದೆ. ಪಂಜಾಬ್‌ನಲ್ಲಿ 14 ತಂಡಗಳು ಕಾರ್ಯನಿರ್ವಹಿಸುತ್ತಿದ್ದರೆ, ಹಿಮಾಚಲ ಪ್ರದೇಶದಲ್ಲಿ ಒಂದು ಡಜನ್, ಉತ್ತರಾಖಂಡದಲ್ಲಿ ಎಂಟು ಮತ್ತು ಹರಿಯಾಣದಲ್ಲಿ ಐದು ತಂಡಗಳನ್ನು ನಿಯೋಜಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com