ಮಣಿಪುರ ಹಿಂಸಾಚಾರದ ತನಿಖೆಗೆ ಸಮಿತಿ ರಚನೆ; ಶಸ್ತ್ರಾಸ್ತ್ರ ಒಪ್ಪಿಸದಿದ್ದರೆ ಕಠಿಣ ಕ್ರಮ: ಅಮಿತ್ ಶಾ ಎಚ್ಚರಿಕೆ
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಲಭೆಕೋರರಿಗೆ ಎಚ್ಚರಿಕೆ ನೀಡಿದ್ದಾರೆ.
Published: 01st June 2023 12:29 PM | Last Updated: 01st June 2023 12:29 PM | A+A A-

ಕೇಂದ್ರ ಗೃಹ ಸಚಿವ ಅಮಿತ್ ಶಾ
ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಲಭೆಕೋರರಿಗೆ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸುವ ಯೋಜನೆಯ ಭಾಗವಾಗಿ ಹಿಂಸಾಚಾರದ ಕುರಿತು ತನಿಖೆಗೆ ಸಮಿತಿ ರಚಿಸುವುದಾಗಿ ಕೇಂದ್ರ ಗೃಹ ಸಚಿವರು ಘೋಷಿಸಿದ್ದಾರೆ.
ಇದನ್ನು ಓದಿ: ಮಣಿಪುರ ಹಿಂಸಾಚಾರ ಸಂತ್ರಸ್ತರಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಅಮಿತ್ ಶಾ!
ಈಶಾನ್ಯ ರಾಜ್ಯಕ್ಕೆ ತಮ್ಮ ನಾಲ್ಕು ದಿನಗಳ ಭೇಟಿಯ ಸಂದರ್ಭದಲ್ಲಿ ಸರಣಿ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ನಿವೃತ್ತ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು. ಅಲ್ಲದೆ ರಾಜ್ಯಪಾಲರು ಮತ್ತು ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಹಾಗೂ ನಾಗರಿಕರನ್ನು ಒಳಗೊಂಡ ಶಾಂತಿ ಸಮಿತಿ ರಚಿಸಲಾಗುವುದು ಎಂದು ಹೇಳಿದ್ದಾರೆ.
ಹಿಂಸಾಚಾರಕ್ಕೆ ಸಂಬಂಧಿಸಿದ ಆರು ಪ್ರಕರಣಗಳನ್ನು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ತನಿಖೆ ನಡೆಸಲಿದೆ. "ಕೇಂದ್ರದ ಮಾರ್ಗದರ್ಶನದಲ್ಲಿ ಸಿಬಿಐ ತನಿಖೆ ನಡೆಸುತ್ತದೆ. ತನಿಖೆ ಪಾರದರ್ಶಕವಾಗಿರಲಿದೆ ಮತ್ತು ಹಿಂಸಾಚಾರದ ಹಿಂದಿನ ಮೂಲ ಕಾರಣಗಳನ್ನು ಪತ್ತೆಹಚ್ಚಲಿದೆ ಎಂದು ನಾನು ಎಲ್ಲರಿಗೂ ಭರವಸೆ ನೀಡುತ್ತೇನೆ ಎಂದರು.
ಇದೇ ವೇಳೆ ಭದ್ರತಾ ಸಿಬ್ಬಂದಿಯಿಂದ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಒಪ್ಪಿಸದಿದ್ದರೆ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.