
ಸಂಗ್ರಹ ಚಿತ್ರ
ರಜೌರಿ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ರಜೌರಿ ಪ್ರದೇಶದ ದಸ್ಸಾಲ್ ಅರಣ್ಯದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಉಗ್ರನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
ಸ್ಥಳದಲ್ಲಿ ಎಷ್ಟು ಉಗ್ರರು ಅಡಗಿಕುಳಿತಿದ್ದಾರೆಂಬ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ. ಸದ್ಯ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಮುಂದುವರಿಸಿವೆ. ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಶಸ್ತ್ರಾಸ್ತ್ರ, ಮದ್ದುಗುಂಡುಗಳೊಂದಿಗೆ ಇಬ್ಬರು ಲಷ್ಕರ್ ಸಹಚರರ ಬಂಧನ
ರಜೌರಿ ಪ್ರದೇಶದ ದಸ್ಸಾಲ್ ಅರಣ್ಯದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ಸಿಕ್ಕಿದ್ದು, ಈ ಮಾಹಿತಿ ಆಧರಿಸಿ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದರು.
ಭದ್ರತಾ ಪಡೆಗಳು ಉಗ್ರರ ಅಡಗುತಾಣಗಳ ಬಳಿಗೆ ಹೋಗುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಿದ ಭದ್ರತಾ ಪಡೆಗಳು ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.