ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 233ಕ್ಕೆ ಏರಿಕೆ, 900 ಮಂದಿ ಗಾಯ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ನಲ್ಲಿ ಹಳಿತಪ್ಪಿದ ರೈಲಿನ ಬೋಗಿಗಳಿಗೆ ಮತ್ತೊಂದು ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು 900 ಜನರು ಗಾಯಗೊಂಡಿದ್ದಾರೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪಿಕೆ ಜೆನಾ ತಿಳಿಸಿದ್ದಾರೆ.
ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತ
ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತ

ನವದೆಹಲಿ: ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ನಲ್ಲಿ ಹಳಿತಪ್ಪಿದ ರೈಲಿನ ಬೋಗಿಗಳಿಗೆ ಮತ್ತೊಂದು ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು 900 ಜನರು ಗಾಯಗೊಂಡಿದ್ದಾರೆ. ಮೂರನೇ ಸರಕು ಸಾಗಣೆ ರೈಲು ಕೂಡ ಅಪಘಾತದಲ್ಲಿ ಸಿಲುಕಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪಿಕೆ ಜೆನಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿನ ಅತ್ಯಂತ ಮಾರಣಾಂತಿಕ ಅಪಘಾತಗಳಲ್ಲಿ ಒಂದಾದ ಈ ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ.

ಇತ್ತೀಚಿನ ವರದಿಯನ್ನು ಉಲ್ಲೇಖಿಸಿ ಒಡಿಶಾ ಮುಖ್ಯ ಕಾರ್ಯದರ್ಶಿ, ಕೋಲ್ಕತ್ತಾದಿಂದ ದಕ್ಷಿಣಕ್ಕೆ 250 ಕಿಮೀ ಮತ್ತು ಭುವನೇಶ್ವರದಿಂದ 170 ಕಿಮೀ ಉತ್ತರಕ್ಕಿರುವ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ 233 ಮಂದಿ ಸಾವಿಗೀಡಾಗಿದ್ದು, ಸುಮಾರು 900 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. 

ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಮೀಪದ ಜಿಲ್ಲೆಗಳ ಎಲ್ಲಾ ಆಸ್ಪತ್ರೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೂರು ಎನ್‌ಡಿಆರ್‌ಎಫ್ ಘಟಕಗಳು, 4 ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಗಳು, 15ಕ್ಕೂ ಹೆಚ್ಚು ಅಗ್ನಿಶಾಮಕ ರಕ್ಷಣಾ ತಂಡಗಳು, 30 ವೈದ್ಯರು, 200 ಪೊಲೀಸ್ ಸಿಬ್ಬಂದಿ ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ತಿಳಿಸಿದ್ದಾರೆ.

ಭೀಕರ ರೈಲು ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದ್ದಾರೆ.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ವಾಯುಪಡೆಯನ್ನು ಕರೆಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನನ್ನ ಪ್ರಾರ್ಥನೆಗಳು ಮತ್ತು ದುಃಖತಪ್ತ ಕುಟುಂಬಗಳಿಗೆ ಸಂತಾಪ. ಭುವನೇಶ್ವರ ಮತ್ತು ಕೋಲ್ಕತ್ತಾದಿಂದ ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ಎನ್‌ಡಿಆರ್‌ಎಫ್, ರಾಜ್ಯ ಸರ್ಕಾರದ ರಕ್ಷಣಾ ತಂಡಗಳು ಮತ್ತು ವಾಯುಪಡೆ ಕೂಡ ಸಜ್ಜುಗೊಂಡಿದೆ. ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಿಗೆ ₹ 10 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ₹ 2 ಲಕ್ಷ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ ₹ 50,000 ಪರಿಹಾರ ನೀಡುವುದಾಗಿ ವೈಷ್ಣವ್ ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಖ್ಯ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಆಗ್ನೇಯ ರೈಲ್ವೆಯ ಖರಗ್‌ಪುರ ವಿಭಾಗದಲ್ಲಿ ಹೌರಾ-ಚೆನ್ನೈ ಮುಖ್ಯ ಮಾರ್ಗದಲ್ಲಿ ಸಂಭವಿಸಿದ ಅಪಘಾತದಿಂದಾಗಿ ಇದುವರೆಗೆ 18 ದೂರದ ರೈಲುಗಳನ್ನು ರದ್ದುಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com