ಪಾಟ್ನಾ ಸಭೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು 17 ಪ್ರತಿಪಕ್ಷಗಳಿಂದ ನಿರ್ಧಾರ
ಪಾಟ್ನಾ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸಾಹದಿಂದ ಕೆಲಸ ಮಾಡಲು 17 ವಿರೋಧ ಪಕ್ಷಗಳು ಶುಕ್ರವಾರ ನಿರ್ಧರಿಸಿವೆ.
ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಪ್ರತಿಪಕ್ಷಗಳ ಸುದೀರ್ಘ ಸಭೆಯ ನಂತರ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರು, ಸಭೆಯಲ್ಲಿ 17 ಪಕ್ಷಗಳ ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಾಯಕರು ಒಟ್ಟಾಗಿ ಹೋರಾಡುವ ಯೋಜನೆಗೆ ಅಂತಿಮ ರೂಪ ನೀಡಲಾಗುವುದು ಎಂದು ಹೇಳಿದರು.
"ನಾವು ಉತ್ತಮ ಸಭೆ ನಡೆಸಿದ್ದೇವೆ ಮತ್ತು ಸಭೆಯಲ್ಲಿ ಹಲವಾರು ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. 17 ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಮತ್ತು ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಧರಿಸಿವೆ" ಎಂದು ಬಿಹಾರ ಸಿಎಂ ತಿಳಿಸಿದ್ದಾರೆ.
ನಾವು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ದೇಶದ ಇತಿಹಾಸವನ್ನು ತಿರುಚಲು ಪ್ರಯತ್ನಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ನಿತೀಶ್ ಕುಮಾರ್ ಆರೋಪಿಸಿದರು.
ಮುಂದಿನ ತಿಂಗಳು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಪ್ರತಿಪಕ್ಷ ನಾಯಕರ ಮುಂದಿನ ಸಭೆ ನಡೆಯಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ.
ಸಾಮಾನ್ಯ ಕಾರ್ಯಸೂಚಿ ಸಿದ್ಧಪಡಿಸಲು ನಿರ್ಧರಿಸಿದ್ದು, ಮುಂದಿನ ಸಭೆಯಲ್ಲಿ ಯಾವ ರೀತಿ ಮುನ್ನಡೆಯಬೇಕು ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಖರ್ಗೆ ತಿಳಿಸಿದ್ದಾರೆ.
ನಾವು ಪ್ರತಿ ರಾಜ್ಯಕ್ಕೂ ಪ್ರತ್ಯೇಕ ಯೋಜನೆಗಳನ್ನು ರೂಪಿಸಬೇಕು ಮತ್ತು ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ನಮ್ಮಲ್ಲಿ ಕೆಲವು ಭಿನ್ನಾಭಿಪ್ರಾಯಗಳಿರಬಹುದು. ಆದರೆ ಪರಸ್ಪರ ಅರ್ಥ ಮಾಡಿಕೊಂಡು ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ ಮತ್ತು ನಮ್ಮ ಸಿದ್ಧಾಂತವನ್ನು ರಕ್ಷಿಸಲು ಕೆಲಸ ಮಾಡುತ್ತೇವೆ" ಎಂದರು.
ಈ ವೇಳೆ ಮಾತನಾಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು, ಪಾಟ್ನಾದಲ್ಲಿ ಮೊದಲ ಪ್ರತಿಪಕ್ಷ ನಾಯಕರ ಸಭೆ ಆಯೋಜಿಸಲಾಗಿದ್ದು, "ಪಾಟ್ನಾದಿಂದ ಏನೇ ಆರಂಭವಾದರೂ ಅದು ಸಾರ್ವಜನಿಕ ಚಳುವಳಿಯ ರೂಪ ಪಡೆದುಕೊಳ್ಳುತ್ತದೆ" ಎಂದರು.
ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ. ಬಿಜೆಪಿ ಇತಿಹಾಸವನ್ನು ತಿರುಚಲು ಬಯಸುತ್ತದೆ. ಆದರೆ ನಾವು ಇತಿಹಾಸವನ್ನು ಉಳಿಸುತ್ತೇವೆ ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ