ಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐ ಸಮನ್ಸ್, ತನಿಖಾ ಸಂಸ್ಥೆಯ ಕಡೆಗೆ ಸುಳಿಯದ ಬಿಹಾರ ಡಿಸಿಎಂ ತೇಜಸ್ವಿ ಯಾದವ್
ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ವಿಚಾರಣೆಗೆ ಹಾಜರಾಗುವಂತೆ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಸಿಬಿಐ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published: 11th March 2023 11:53 AM | Last Updated: 11th March 2023 04:05 PM | A+A A-

ತೇಜಸ್ವಿ ಯಾದವ್
ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ವಿಚಾರಣೆಗೆ ಹಾಜರಾಗುವಂತೆ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಸಿಬಿಐ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮಾರ್ಚ್ 4 ರಂದು ಯಾದವ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಆದರೆ, ಅವರು ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿರಲಿಲ್ಲ. ನಂತರ ಶನಿವಾರದಂದು ಹೊಸ ದಿನಾಂಕವನ್ನು ನೀಡಲಾಯಿತು ಎಂದು ಅವರು ಹೇಳಿದರು.
ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕನನ್ನು ಶನಿವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಆದರೆ, ಅವರು ಇನ್ನೂ ಇಲ್ಲಿನ ಕೇಂದ್ರೀಯ ತನಿಖಾ ದಳದ (ಸಿಬಿಐ) ಪ್ರಧಾನ ಕಚೇರಿಗೆ ಆಗಮಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖಾ ಸಂಸ್ಥೆಯು ಇತ್ತೀಚೆಗೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಅವರ ಪತ್ನಿ ರಾಬ್ರಿ ದೇವಿಯನ್ನು ಕ್ರಮವಾಗಿ ದೆಹಲಿ ಮತ್ತು ಪಾಟ್ನಾದಲ್ಲಿ ಪ್ರಶ್ನಿಸಿತ್ತು.
ಇದನ್ನೂ ಓದಿ: ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಕುಟುಂಬ, ಆರ್‌ಜೆಡಿ ನಾಯಕರಿಗೆ ಸೇರಿದ ಜಾಗದಲ್ಲಿ ಇ.ಡಿ ಶೋಧ
ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ತಮ್ಮ ಕುಟುಂಬಕ್ಕೆ ಜಮೀನನ್ನು ಉಡುಗೊರೆಯಾಗಿ ನೀಡಿದವರು ಅಥವಾ ಅಗ್ಗದ ದರದಲ್ಲಿ ಮಾರಾಟ ಮಾಡಿದ್ದ ಕುಟುಂಬಗಳಿಗೆ ರೈಲ್ವೆಯಲ್ಲಿ ಉದ್ಯೋಗ ನೀಡಿದ್ದರು ಎಂಬ ಆರೋಪವಿದೆ.
ಲಾಲು ಪ್ರಸಾದ್, ಅವರ ಪತ್ನಿ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಇತರ 14 ಜನರ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದ್ದು, ಮಾರ್ಚ್ 15 ರಂದು ವಿಚಾರಣೆಗೆ ಬರುವಂತೆ ಎಲ್ಲಾ ಆರೋಪಿಗಳಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಳಿಕ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಇ.ಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.