
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ
ಲಖನೌ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದು ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದ್ದು, ಅವಶೇಷಗಳಡಿಯಿಂದ 21 ಜನರನ್ನು ರಕ್ಷಿಸಲಾಗಿದೆ.
ಗುರುವಾರ ಮಧ್ಯಾಹ್ನ ಸಂಭಾಲ್ ಜಿಲ್ಲೆಯ ಚಂದೌಸಿ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್‌ನ ಮೇಲ್ಛಾವಣಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿತ್ತು. ಎರಡನೇ ದಿನವೂ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ.
ಇದನ್ನು ಓದಿ: ಕುಸಿದು ಬಿದ್ದ ಕೋಲ್ಡ್ ಸ್ಟೋರೇಜ್; 20ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ
ಅಧಿಕೃತ ಮೂಲಗಳ ಪ್ರಕಾರ, ಇಂದು ಮತ್ತೆ ಇಬ್ಬರು ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು 21 ಜನರನ್ನು ರಕ್ಷಿಸಿದ್ದು, ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಘಟನೆ ನಡೆದ ಸ್ಥಳಕ್ಕೆ ರಾಜ್ಯ ಪಶುಸಂಗೋಪನಾ ಸಚಿವ ಧರಂಪಾಲ್ ಸಿಂಗ್ ಭೇಟಿ ನೀಡಿ, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಂಭಾಲ್ ಜಿಲ್ಲಾ ತೋಟಗಾರಿಕಾ ಅಧಿಕಾರಿಯನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.