ಹಣ ಅಕ್ರಮ ವರ್ಗಾವಣೆ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಏಪ್ರಿಲ್ 5ಕ್ಕೆ ಮುಂದೂಡಿದ ಕೋರ್ಟ್
ಅಬಕಾರಿ ನೀತಿ ಹಗರಣದಿಂದ ಉದ್ಭವಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಶನಿವಾರ ಏಪ್ರಿಲ್ 5ಕ್ಕೆ ಮುಂದೂಡಿದೆ.
Published: 25th March 2023 11:47 AM | Last Updated: 25th March 2023 11:50 AM | A+A A-

ಮನೀಶ್ ಸಿಸೋಡಿಯಾ
ನವದೆಹಲಿ: ಅಬಕಾರಿ ನೀತಿ ಹಗರಣದಿಂದ ಉದ್ಭವಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಶನಿವಾರ ಏಪ್ರಿಲ್ 5ಕ್ಕೆ ಮುಂದೂಡಿದೆ.
ಸಿಸೋಡಿಯಾ ಪರ ವಕೀಲರು ತಮ್ಮ ಕಕ್ಷಿದಾರರ ಜಾಮೀನು ಅರ್ಜಿಗೆ ಸಲ್ಲಿಸಿದ ಇ.ಡಿ ಉತ್ತರಕ್ಕೆ ಪ್ರತಿಕ್ರಿಯಿಸಲು ಸಮಯ ಕೋರಿದ ನಂತರ ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ವಿಚಾರಣೆಯನ್ನು ಮುಂದೂಡಿದರು.
ಈ ವಿಚಾರದಲ್ಲಿ ವಿವರವಾದ ವಾದ ಮಂಡಿಸಲು ಸ್ವಲ್ಪ ಕಾಲಾವಕಾಶ ಬೇಕು ಎಂದು ಸಿಸೋಡಿಯಾ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ಮಾರ್ಚ್ 9 ರಂದು ಇ.ಡಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಬಂಧಿಸಿತು. ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಇರಿಸಲಾಗಿತ್ತು.
ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಸೋಡಿಯಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್
2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 26 ರಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನನ್ನು ಸಿಬಿಐ ಬಂಧಿಸಿತು.
ಸಿಬಿಐ ಪ್ರಕರಣದಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್ 31 ರಂದು ಪ್ರಕಟಿಸುವುದಾಗಿ ನ್ಯಾಯಾಲಯ ಶುಕ್ರವಾರ ಹೇಳಿತ್ತು.